ವಿವಾದಾತ್ಮಕ ಹೇಳಿಕೆ ಆರೋಪ; ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್ಐಆರ್ ದಾಖಲು

ಛಲವಾದಿ ನಾರಾಯಣಸ್ವಾಮಿ
ಕೋಲಾರ : ಕಾಂಗ್ರೆಸ್ ಪಕ್ಷದ ವಿರುದ್ಧ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ಕೋಲಾರದಲ್ಲಿ ಪ್ರತ್ಯೇಕವಾಗಿ 3 ದೂರುಗಳನ್ನು ಸಲ್ಲಿಸಿದ್ದರು. ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ನ್ಯಾಯಾಲಯದ ಪೂರ್ವಾನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಅದರಂತೆ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕ್ರಿಯೆ ಆರಂಭವಾಗಿದೆ.
ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.




