Kolar | ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು, ಐವರಿಗೆ ಗಾಯ

ಕೋಲಾರ : ಚೆನ್ನೈ–ಬೆಂಗಳೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ.
ಮೃತರನ್ನು ಬೆಂಗಳೂರು ರಾಮಪುರ ಮೂಲದ ಮೋಗನಾ (41) ಹಾಗೂ ಕಾರು ಚಾಲಕ ಜಯಂತ್ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಷಣ್ಮುಗ (53), ಪೂಜಾ (27), ರಾಜೇಶ್ (29), ಬಾಬು (31) ಹಾಗೂ ವಿಜಯಲಕ್ಷ್ಮೀ (24) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀ ಕಾಳಹಸ್ತಿ ದೇವಾಲಯಕ್ಕೆ ತೆರಳಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು, ಕುಪ್ಪನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ವಿಷಯ ತಿಳಿದು ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




