ಕೋಮುಲ್ ಅಧ್ಯಕ್ಷರಾಗಿ ಮೂರನೇ ಬಾರಿಗೆ ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ

ಕೋಲಾರ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋಲಾರ ಹೊರವಲಯದಲ್ಲಿ ಇರುವ ಕೋಮುಲ್ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಶಾಸಕ ಕೆ.ವೈ.ನಂಜೇಗೌಡ ಅರ್ಜಿ ಸಲ್ಲಿಸಿದ್ದ ಏಕ ಮಾತ್ರ ಅಭ್ಯರ್ಥಿ ಆಗಿದ್ದರು. ಚುನಾವಣಾಧಿಕಾರಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಅವರು ಮದ್ಯಾಹ್ನ 2 ಗಂಟೆಗೆ ಉಮೇದುವಾರಿಕೆ ವಾಪಸ್ಸು ಪಡೆಯಲು ಇದ್ದ ಗಡುವು ಮುಕ್ತಾಯವಾದ ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದ ಏಕೈಕ ಅಭ್ಯರ್ಥಿ ಆಗಿದ್ದು , ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಣೆ ಮಾಡಿದರು.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವಿಭಜನೆಯ ನಂತರ ನಡೆದ ಈ ಚುನಾವಣೆಯಲ್ಲಿ ಒಟ್ಟು 13 ಜನ ನಿರ್ದೇಶಕರು ಮತ್ತು 5 ಜನ ಸರ್ಕಾರದ ಪ್ರತಿನಿಧಿಗಳು ಮತದಾನದ ಹಕ್ಕು ಪಡೆದಿದ್ದಾರೆ. ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಬಹುಮತ ಇದ್ದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದೆ.