ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ : ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಎಚ್. ಸಂಗಟಿ(61) ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಬಹು ಅಂಗಾಂಗಗಳ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕರಿಯಣ್ಣ, 2008ರ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಪಕ್ಷೇತರರಾಗಿ, 2018ರ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಕಾಳಿದಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವ ಮಂಡಲದ ಅಧ್ಯಕ್ಷರಾಗಿ ಹಾಗೂ ಜಿಲ್ಲೆಯ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು.
ಸಚಿವ ಶಿವರಾಜ ತಂಗಡಗಿ ಸಂತಾಪ
ಕೊಪ್ಪಳ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ. ಎಚ್.ಸಂಗಟಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ತಿನ ಸದಸ್ಯರಾಗಿ ಒಳ್ಳೆಯ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಅವರ ನಿಧನ ನೋವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಹಾಗೂ ಅವರ ಅನುಯಾಯಿಗಳಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.







