Gangavathi | ಮೇಲಧಿಕಾರಿಗಳ ಕಿರುಕುಳ ಆರೋಪ: ಸರಕಾರಿ ನೌಕರ ಕಾಲುವೆಗೆ ಹಾರಿ ಆತ್ಮಹತ್ಯೆ

ಗಂಗಾವತಿ: ಮೇಲಧಿಕಾರಿಗಳ ನಿರಂತರ ಕಿರುಕುಳದಿಂದ ಮನನೊಂದು ಸರ್ಕಾರಿ ನೌಕರರೊಬ್ಬರು ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಸೋಮವಾರ ನಡೆದಿದೆ.
ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಕಲಚೇತನ ನೌಕರ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಗಂಗಾವತಿಯ ತಮ್ಮ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಆರಾಳ ಗ್ರಾಮದ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಮಂಜುನಾಥ ಅವರ ತ್ರಿಚಕ್ರ ವಾಹನ ಹಾಗೂ ಪಾದರಕ್ಷೆಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಡೆತ್‌ನೋಟ್‌ನಲ್ಲಿ ಗಂಗಾವತಿ ಬಿಇಒ ನಟೇಶ್ ಎಚ್.ಬಿ., ಸುಪರಿಂಟೆಂಡೆಂಟ್ ಶಿವಪ್ರಸಾದ್ ಸ್ವಾಮಿ ಹಾಗೂ ಅಧೀಕ್ಷಕಿ ರೇಣುಕಾ ವೈ.ಗೌಡರ್ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದ್ದು, ಈ ಅಧಿಕಾರಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಜುನಾಥ ಅವರಿಗಾಗಿ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಘಟನೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






