ಗಂಗಾವತಿ | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಗಂಗಾವತಿ: ರಾಜ್ಯದಲ್ಲಿ ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಶ್ರೀ ಚನ್ನಬಸವ ಸ್ವಾಮಿ ವೃತ್ತದಿಂದ ಗಾಂಧಿ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರವಾಗುವ ಬದಲು ರಿಯಲ್ ಎಸ್ಟೇಟ್ ಸರ್ಕಾರವಾಗಿ ಮಾರ್ಪಟ್ಟಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವಂತೆ ಕಾಣುತ್ತಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಅವರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದರು.
ನಂದಿನಿ ತುಪ್ಪದ ಬೆಲೆ ಪ್ರತಿ ಕೆ.ಜಿ.ಗೆ 850 ರೂ. ಗಡಿ ತಲುಪಿದ್ದು, ಹಾಲು, ಮೊಸರು, ಅಕ್ಕಿ ಸೇರಿದಂತೆ ದಿನನಿತ್ಯ ಬಳಕೆಯ ವಿವಿಧ ಆಹಾರ ಪದಾರ್ಥಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಜೀವನ ನಿರ್ವಹಣೆ ಮಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕಾದ ಸರ್ಕಾರವೇ ಬೆಲೆ ಏರಿಕೆಯ ಮೂಲಕ ಮತ್ತಷ್ಟು ಹೊರೆ ಹೇರುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರವು ಜನಸಾಮಾನ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಮನೋಹರಗೌಡ ಹೆರೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಅರಕೇರಿ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ಪಕ್ಷದ ಮುಖಂಡರಾದ ವೀರೇಶ್ ಬಲಕುಂದಿ, ಅಮರಜ್ಯೋತಿ ನರಸಪ್ಪ, ವಿರೂಪಾಕ್ಷಪ್ಪ ಹೆರೂರು, ಮೌಲಸಾಬ್, ರಮೇಶ್ ಹೊಸಮಲಿ, ವಿಶ್ವ ಕೇಸರಹಟ್ಟಿ, ಮಹಾಂತೇಶ ಸ್ವಾಮಿ, ಬಸವರಾಜ್, ಮಾಲ ನಾಯ್ಕ್, ಭಾರತಿ ಹಗಲೂರು, ಹನುಮಂತಪ್ಪ ನಾಯಕ್, ವೀರಭದ್ರಪ್ಪ ನಾಯಕ್, ದೀಪಕ್ ಬಾಂಟೀಯ, ಮಂಜುನಾಥ ಗೊಂದಿ, ಸಂಗಮೇಶ್ ಅಯೋಧ್ಯ, ಆನಂದ್ ಕೌಟಿ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






