ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ರಿಗೆ ರಾಜ್ಯಪಾಲರಿಂದ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ

ಕೊಪ್ಪಳ: ಚುನಾವಣಾ ಪ್ರಕ್ರಿಯೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸುರೇಶ್ ಬಿ.ಇಟ್ನಾಳ್ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿದ್ದಾರೆ.
ಭಾನುವಾರ ಬೆಂಗಳೂರಿನ ಶ್ರೀ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್‌ನಲ್ಲಿ ಆಯೋಜಿಸಲಾಗಿದ್ದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ, ಚುನಾವಣಾ ಕಾರ್ಯಗಳಲ್ಲಿ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣೆ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು, ಬಿಎಲ್‌ಓ ಮೇಲ್ವಿಚಾರಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತದೆ.
2025–26ನೇ ಸಾಲಿನ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಅದರಲ್ಲಿ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಘೋಷಿಸಲಾಗಿತ್ತು.
ಇದೇ ಸಂದರ್ಭದಲ್ಲಿ 64–ಕೊಪ್ಪಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 208ರ ಬೂತ್ ಮಟ್ಟದ ಅಧಿಕಾರಿ, ಹಿರೇಬಗನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕರಾದ ಸತೀಶಚಂದ್ರ ಅವರಿಗೆ ಉತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.







