Kanakagiri | ನಿವೇಶನ ಒತ್ತುವರಿ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆ ಪ್ರಕರಣ : ಮೃತನ ಕುಟುಂಬಸ್ಥರಿಂದ ಠಾಣೆ ಮುಂದೆ ಪ್ರತಿಭಟನೆ

ಕನಕಗಿರಿ: ನಿವೇಶನ ಜಾಗ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೊಳಗಾಗಿ ಮಾನಸಿಕವಾಗಿ ನೊಂದಿದ್ದ ಬಸವರಾಜ ರೆಡ್ಡಿ ಮಾದಿನಾಳ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಭಾನುವಾರ ರಾತ್ರಿ ಸ್ಥಳೀಯ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಕೇಸ್ ದಾಖಲಾಗಿದ್ದರೂ ಆರು ಗಂಟೆ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ. ಯಾರದೋ ಒತ್ತಡಕ್ಕೆ ಮಣಿದು ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮೃತ ಬಸವರಾಜ ರೆಡ್ಡಿ ಅವರ ಕುಟುಂಬಸ್ಥರು ಆ.13ರಂದು ಠಾಣೆಗೆ ಬಂದಿದ್ದರೂ ದೂರು ದಾಖಲಿಸದೆ ಪೊಲೀಸರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಣ ಪಡೆದು ನಿವೇಶನಕ್ಕೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಆರೋಪಿಗಳಿಗೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳು ಹಾಗೂ ಅವರ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಕನಕಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಠಾಣೆ ಎದುರು ನೂರಾರು ಮಂದಿ ಜಮಾಯಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಕೊಪ್ಪಳ ಎಸ್ಪಿ ಎಲ್. ರಾಮ್ ಅರಸಿದ್ದಿ ಹಾಗೂ ವಿಜಯನಗರ ಎಸ್ಪಿ ಎಸ್. ಜಾನವಿ ಭೇಟಿ ನೀಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಹಕರಿಸುವಂತೆ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಮನವಿ ಮಾಡಿದರು.
ಡಿವೈಎಸ್ಪಿಗಳಾದ ನ್ಯಾಮನಗೌಡ, ಸಿದ್ದಲಿಂಗನಗೌಡ ಹಾಗೂ ಪಿಐ ವಿ. ನಾರಾಯಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು. ಐದಕ್ಕೂ ಹೆಚ್ಚು ಪೊಲೀಸ್ ವ್ಯಾನ್‌ಗಳನ್ನು ನಿಯೋಜಿಸಲಾಗಿದ್ದು, ಗಂಗಾವತಿ ಹಾಗೂ ಕೊಪ್ಪಳದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಸಲಾಗಿತ್ತು.






