Kanakagiri | ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗೌರವಧನ ಬಿಡುಗಡೆಗೆ ಮನವಿ

ಕನಕಗಿರಿ : ಏಪ್ರಿಲ್ ತಿಂಗಳಲ್ಲಿ ಜನಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಗೌರವಧನ ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಚಂದ್ರಶೇಖರ ಗಾಳಿ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಚಂದ್ರಶೇಖರ ಗಾಳಿ, ನೌಕರರ ಸಂಘದ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಲ್ಲೂಕು ನೌಕರರ ಸಂಘದ ಅಧ್ಯಕ್ಷೆ ಶಂಶಾದ್ ಬೇಗಂ ಮಾತನಾಡಿ, 2006ರ ಏಪ್ರಿಲ್ ನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಇಲ್ಲದಿರುವುದು ಅನ್ಯಾಯವಾಗಿದೆ. ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ನೌಕರರಿಗೆ ಅನುಕೂಲಕರವಾಗಿಲ್ಲ. ಆದ್ದರಿಂದ ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವಂತೆ ಸಂಘ ನಿರಂತರ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.
ಜುಲೈ 11ರಂದು ರಾಜ್ಯ ಸಂಘದ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಮನವಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸುವಂತೆ ಅವರು ಕರೆ ನೀಡಿದರು.
ಸಂಘದ ಕೋಶಾಧ್ಯಕ್ಷ ಗುರುಲಿಂಗಯ್ಯ ಪಂಜಿನ ಪೂಜಾರಿ, ಪ್ರಧಾನ ಕಾರ್ಯದರ್ಶಿ ಉಮೇಶ ಕಂದಕೂರು, ನಿರ್ದೇಶಕ ಶೇಖರಯ್ಯ ಕಲ್ಮಠ ಇತರರು ಇದ್ದರು.




