Kanakagiri | ಬಾಲಕಿಯರ ಶಾಲೆ ಸ್ಥಳಾಂತರಿಸಿ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ಕನಕಗಿರಿ: ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಪ್ರಸ್ತುತ ಶಾಲೆಯಲ್ಲಿ ಮಕ್ಕಳಿಗೆ ಪ್ರಾರ್ಥನೆ ನಡೆಸಲು ಸೂಕ್ತ ಸ್ಥಳಾವಕಾಶವಿಲ್ಲ. ಕಟ್ಟಡದ ಮೇಲೆ ನಿಂತು ಪ್ರಾರ್ಥನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ಕ್ರೀಡಾಂಗಣವೂ ಇಲ್ಲದಿರುವುದರಿಂದ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಪಟ್ಟಣದಲ್ಲಿ ಸೂಕ್ತ ಸ್ಥಳಾವಕಾಶದ ಕೊರತೆಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿಲ್ಲದಂತಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಗತ್ಯ ಕ್ರೀಡಾ ಸಾಮಗ್ರಿಗಳು ಹಾಗೂ ಬಯಲು ಕೊಟ್ಟಡಿಯ ವ್ಯವಸ್ಥೆ ಮಾಡಬೇಕು. ಆದ್ದರಿಂದ ಸೂಕ್ತ ಸ್ಥಳದಲ್ಲಿ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಕಟ್ಟಡ, ಅಗತ್ಯ ಮೂಲಸೌಕರ್ಯ ಹಾಗೂ ವಿಶಾಲವಾದ ಕ್ರೀಡಾಂಗಣ ನಿರ್ಮಿಸಿ, ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಅಯ್ಯನಗೌಡ ಅಳ್ಳಳಿ ಹಾಗೂ ಸಂಪತ್ ಕುಮಾರ ಒತ್ತಾಯಿಸಿದ್ದಾರೆ.




