Kanakagiri | ಗುಳೆ ತಡೆಗೆ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿ: ಇಒ ರಾಜಶೇಖರ

ಕನಕಗಿರಿ : ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್)ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ತಾಲೂಕಿನ ಎಲ್ಲ 11 ಗ್ರಾಮ ಪಂಚಾಯಿತಿಗಳಲ್ಲಿ ಕೂಲಿಕಾರರಿಗೆ ಉದ್ಯೋಗ ನೀಡಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ ಹೇಳಿದರು.
ಜೀರಾಳ, ಚಿಕ್ಕಡಂಕನಕಲ್ ಹಾಗೂ ನವಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಜುಲೈ 1ರಿಂದ ಪ್ರತಿಯೊಬ್ಬ ಕೂಲಿಕಾರರಿಗೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗ ಖಾತ್ರಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಯೋಜನೆಯಡಿ ಸಾಮೂಹಿಕ ಹಾಗೂ ವೈಯಕ್ತಿಕ ಸೇರಿ ಒಟ್ಟು 318 ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಐಇಸಿ ಸಂಯೋಜಕ ಶಿವಕುಮಾರ್ ಕೆ. ತಿಳಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳನ್ನು ಗ್ರಾಮೀಣ ಕೂಲಿಕಾರರು ಸದುಪಯೋಗಪಡಿಸಿಕೊಂಡು ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಪಡೆಯುವಂತೆ ಅಧಿಕಾರಿಗಳು ಮನವಿ ಮಾಡಿದರು.




