Kanakagiri | ಜೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಯೋಜನೆ ಪರಿಶೀಲನೆ

ಕನಕಗಿರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ಮನೆಗಳಿಗೆ ಜೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದರು.
ಜೆಸ್ಕಾಂ ಸಿಬ್ಬಂದಿ ಆನಂದ ಮಾತನಾಡಿ, ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಲ್ಲಿ ಅಕ್ರಮ ಬಳಕೆ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸರ್ಕಾರ ಜುಲೈ 1ರಿಂದ ಮನೆ-ಮನೆ ಪರಿಶೀಲನಾ ಅಭಿಯಾನ ಆರಂಭಿಸಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಫಲಾನುಭವಿಗಳ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಪ್ರಮಾಣಪತ್ರ, ವಿದ್ಯುತ್ ಬಿಲ್ ಸೇರಿದಂತೆ ಫಲಾನುಭವಿಗಳು ಕರ್ನಾಟಕದ ನಿವಾಸಿಗಳೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ವಾಣಿಜ್ಯ ಕಟ್ಟಡಗಳಲ್ಲಿ ವಾಸಿಸುವವರು ಸೇರಿದಂತೆ ಕೆಲ ಅನರ್ಹರು ನಿಯಮ ಉಲ್ಲಂಘಿಸಿ ಯೋಜನೆಯ ಸೌಲಭ್ಯ ಪಡೆಯುತ್ತಿರುವುದನ್ನು ತಡೆಯುವ ಉದ್ದೇಶದಿಂದ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಪರಿಶೀಲನಾ ಪ್ರಕ್ರಿಯೆ ವೇಳೆ ಬಾಡಿಗೆದಾರರು ಹಾಗೂ ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಜೆಸ್ಕಾಂ ಸಿಬ್ಬಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.




