ಕನಕಗಿರಿ| ಪೊಕ್ಸೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಕನಕಗಿರಿ: ತಾಲೂಕಿನ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಂಗಾವತಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಶನಿವಾರ ನಡೆಯಿತು.
ಈ ವೇಳೆ ವಕೀಲರಾದ ದೇವರಾಜ ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದ ಪೋಕ್ಸೋ ಕಾಯ್ದೆ ಜಾರಿಯಲ್ಲಿದ್ದು, ಮಕ್ಕಳ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗೆ ಈ ಕಾಯ್ದೆ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದರೆ ಭಯಪಡದೆ ತಕ್ಷಣ ಪೋಷಕರು, ಶಿಕ್ಷಕರು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕರೆ ನೀಡಿದರು.
ಉದ್ದಿಹಾಳ ಶಾಲೆಯ ಮುಖ್ಯೋಪಾಧ್ಯಾಯ ಹನುಮೇಶ ವೈ ಮಾತನಾಡಿ ಬಾಲ್ಯವಿವಾಹದಿಂದ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಬಾಲ್ಯವಿವಾಹ ತಡೆಗಟ್ಟಲು ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಮೂಲಕ ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ವೇಳೆ ಶಾಲೆಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




