ಕನಕಗಿರಿ | ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಎಫ್‌ಐ ಮನವಿ

ಕನಕಗಿರಿ: ತಾಲೂಕಿನ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಎಸ್‌ಎಫ್‌ಐ (SFI) ತಾಲೂಕು ಘಟಕದ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ಗಂಗಾವತಿ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಹನುಮೇಶ್ ಮ್ಯಾಗಡೆ ಮಾತನಾಡಿ ತಾಲೂಕಿನ ಗಾಣದಾಳ, ವನಗಡ್ಡಿ, ದೇವಲಾಪುರ, ಗೌರಿಪುರ, ಬಸರಿಹಾಳ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ದಿನನಿತ್ಯ ಕನಕಗಿರಿಗೆ ಶಾಲೆ-ಕಾಲೇಜಿಗೆ ಬರುತ್ತಾರೆ. ಬೆಳಿಗ್ಗೆ 8 ಗಂಟೆಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗೆಯೇ ಮಧ್ಯಾಹ್ನ 2:30ಕ್ಕೆ ಶಾಲೆ-ಕಾಲೇಜು ಮುಗಿದ ನಂತರ ಮನೆಗೆ ಹೋಗಲು ಬಸ್ ಇಲ್ಲದೆ ವಿದ್ಯಾರ್ಥಿಗಳು, ಅದರಲ್ಲೂ ವಿದ್ಯಾರ್ಥಿನಿಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ ಬಸ್ ಘಟಕದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಶಿವುಕುಮಾರ ಈಚನಾಳ, ಮುಖಂಡ ನೀಲಕಂಠ ಬಡಿಗೇರ್, ವಿದ್ಯಾರ್ಥಿಗಳಾದ ಮಂಜುನಾಥ, ರಾಜೇಶ, ಮಧು, ಕನಕಪ್ಪ ಇತರರು ಇದ್ದರು.




