Kanakagiri | ಖಾಲಿ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ನಿರುದ್ಯೋಗ ಹೆಚ್ಚಳ: ಬಸವರಾಜ ಪೂಜಾರ

ಕನಕಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆರೋಪಿಸಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿರುದ್ಯೋಗ ನಿವಾರಣೆ, ಉದ್ಯೋಗದ ಹಕ್ಕು ಹಾಗೂ ಸಂವಿಧಾನದ 371(ಜೆ) ವಿಧಿಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಡಿವೈಎಫ್ಐ ಹೋರಾಟ ನಡೆಸುತ್ತಿದೆ ಎಂದು ಅವರು ಹೇಳಿದರು.
ಸರ್ಕಾರಗಳು ನಿರುದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಕೋಟ್ಯಂತರ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಯುವಜನರನ್ನು ವಂಚಿಸಲಾಗಿದೆ ಎಂದು ಅವರು ಆರೋಪಿಸಿದರು.
ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದರೂ, ಈ ಭಾಗದ ಜನರ ಅಭಿವೃದ್ಧಿಗಾಗಿ ಅಗತ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸದೆ ಸರ್ಕಾರಗಳು ದ್ರೋಹ ಮಾಡುತ್ತಿವೆ ಎಂದು ಕಿಡಿಕಾರಿದರು.
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಡಿವೈಎಫ್ಐ ಮುಖಂಡ ಅಮರೇಶ ಕಡಗದ ಮಾತನಾಡಿ, 371(ಜೆ) ವಿಧಿ ಜಾರಿಯಾಗಿ ಒಂದು ದಶಕ ಕಳೆದರೂ ಈ ಭಾಗದ ಜನರಿಗೆ ಸಮರ್ಪಕ ಆರೋಗ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ಮಂಜುನಾಥ, ಸುಂಕಪ್ಪ ಗದಗ, ಗ್ಯಾನೇಶ್ ಕಡಗದ, ಅಡಿವೆಪ್ಪ ಕಂದಕೂರು, ಬಾಳಪ್ಪ ಹುಲಿಹೈದರ, ದೇವದಾಸಿ ವಿಮೋಚನಾ ಸಂಘಟನೆಯ ರಾಜ್ಯಾಧ್ಯಕ್ಷೆ ಹುಲಿಗೆಮ್ಮ ಗಿಣಿಮೋತಿ, ಸಿಐಟಿಯು ತಾಲೂಕು ಸಂಚಾಲಕ ಮಲ್ಲಪ್ಪ ಮ್ಯಾಗಡೆ, ಪರಶುರಾಮ ಹುಲಿಹೈದರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಮೇಶ ರಾಠೋಡ ಸ್ವಾಗತಿಸಿದರು. ವೀರೇಶ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ತಿಮ್ಮಣ್ಣ ಹೊಮ್ಮಿನಾಳ ವಂದಿಸಿದರು.






