ಕೊಪ್ಪಳ | ವಸತಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಕೊಪ್ಪಳ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಪಂ ಸಿಇಒ ವರ್ಣೀತ್ ನೇಗಿ ಮತ್ತು ಎಸ್ಪಿ ರಾಮ್ ಅರಸಿದ್ಧಿ ಭೇಟಿ ನೀಡಿ ತಾಯಿ-ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.
ಕೊಪ್ಪಳ, ನ.26: ವಸತಿ ನಿಲಯದಲ್ಲಿ ಓದುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಕನೂರು ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ವಸತಿ ನಿಲಯದಲ್ಲಿ ಇದ್ದುಕೊಂಡು ಎಸೆಸೆಲ್ಸಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ತಾಯಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ವಸತಿ ಗೃಹದಲ್ಲೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ತಾಯಿ- ಶಿಶುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಪಂ ಸಿಇಒ ವರ್ಣೀತ್ ನೇಗಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಭೇಟಿ ನೀಡಿ ವಿಚಾರಿಸಿದ್ದಾರೆ.
ಕುಕುನೂರು ಠಾಣಾ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಆರೋಪಿಯ ಬಂಧನ, ವಾರ್ಡನ್ ನ ಬಂಧನ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರಡ್ಡಿ, ಇದೊಂದು ಪೊಕ್ಸೋ ಪ್ರಕರಣವಾಗಿದ್ದು, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಆರೋಪಿ ಯುವಕನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಹಾಗೂ ವಸತಿ ನಿಲಯದ ವಾರ್ಡನ್ ನನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.







