Koppal | ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಖಂಡಿಸಿ ಎಐಎಂಎಸ್ಎಸ್ ಪ್ರತಿಭಟನೆ

ಕೊಪ್ಪಳ : ಪಶ್ಚಿಮ ಬಂಗಾಳ ಹಾಗೂ ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳಿಗೆ ಅತ್ಯುಗ್ರ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಮಂಜುಳಾ ಮಜ್ಜಿಗಿ, ಪಶ್ಚಿಮ ಬಂಗಾಳದ ಬಾರುಪುರ್ ಹಾಗೂ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದೇಶವನ್ನೇ ಬೆಚ್ಚಿಬೀಳಿಸಿದ್ದು, ಇಂತಹ ಅಮಾನವೀಯ ಕೃತ್ಯಗಳಲ್ಲಿ ಭಾಗಿಯಾದ ಎಲ್ಲ ಆರೋಪಿಗಳಿಗೆ ವಿಳಂಬವಿಲ್ಲದೆ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಪ್ರಪಂಚದ ಅರಿವೇ ಇಲ್ಲದ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ. ಇಂತಹ ಪ್ರಕರಣಗಳಲ್ಲಿ ತನಿಖೆ ಮತ್ತು ನ್ಯಾಯ ಪ್ರಕ್ರಿಯೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ 14 ವರ್ಷದ ಬಾಲಕನಿಂದ 9 ತಿಂಗಳ ಹಸುಗೂಸಿನ ಮೇಲೆ ನಡೆದ ಅತ್ಯಾಚಾರ ಘಟನೆಯನ್ನೂ ಉಲ್ಲೇಖಿಸಿದ ಅವರು, ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದು ತೀವ್ರ ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಅಶ್ಲೀಲ ವಿಷಯಗಳ ಪ್ರಸಾರ, ಅಶ್ಲೀಲ ಸಿನಿಮಾ ಹಾಗೂ ಸಾಹಿತ್ಯ, ಮದ್ಯ ಮತ್ತು ಮಾದಕ ವಸ್ತುಗಳ ದುರ್ಬಳಕೆ ಇಂತಹ ಅಪರಾಧಗಳಿಗೆ ಕಾರಣವಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇಶಾದ್ಯಂತ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಲೈಂಗಿಕ ಹಿಂಸಾಚಾರದ ವಿರುದ್ಧ ಪ್ರಜ್ಞಾವಂತ ನಾಗರಿಕರು ಹಾಗೂ ಮಹಿಳಾ ಸಮುದಾಯ ಸಂಘಟಿತ ಹೋರಾಟ ರೂಪಿಸಬೇಕಿದೆ ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ, ಸದಸ್ಯೆ ಪ್ರಭಾವತಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.






