Koppal | ‘ಮತ ಹಾಕಲಿಲ್ಲ’ ಎಂಬ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆ : ಆರೋಪ

ಕನಕಗಿರಿ: ಶಾಲಾ ಸಂಸತ್ ಚುನಾವಣೆಯಲ್ಲಿ ತಮಗೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ 10ನೇ ತರಗತಿಯ ಕೆಲ ವಿದ್ಯಾರ್ಥಿಗಳು ಕಿರಿಯ ತರಗತಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆ (ಎಸ್‌ಸಿ)ಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಮಕ್ಕಳಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಶಾಲಾ ಸಂಸತ್ ಚುನಾವಣೆ ನಡೆಸಲಾಗಿತ್ತು. ಚುನಾವಣೆ ಬಳಿಕ ಸೋತ 10ನೇ ತರಗತಿಯ ಕೆಲ ವಿದ್ಯಾರ್ಥಿಗಳು, ತಮಗೆ ಮತ ಹಾಕದ ಕಿರಿಯ ವಿದ್ಯಾರ್ಥಿಗಳ ಮೇಲೆ ವಸತಿ ನಿಲಯದಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪ್ರಾಚಾರ್ಯ ರಾಜು ಮಡ್ಡಿ ಹಾಗೂ ಶಿಕ್ಷಕರು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಭಾನುವಾರ ಮನೆಗೆ ತೆರಳಿ ಪಾಲಕರಿಗೆ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪಾಲಕರು, ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಶಾಲೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದರು.
ಪ್ರಾಚಾರ್ಯರು ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪಾಲಕರು, ಒಬ್ಬ ಶಿಕ್ಷಕರ ಕುಮ್ಮಕ್ಕಿನಿಂದಲೇ ಘಟನೆ ನಡೆದಿದೆ ಎಂದು ಆರೋಪಿಸಿ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪರಿಸ್ಥಿತಿ ಉದ್ವಿಗ್ನವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಶಾಲೆಗೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಮಂಗಳವಾರ ಅಧಿಕಾರಿಗಳು, ಪೊಲೀಸರು, ಪಾಲಕರು ಹಾಗೂ ಸಿಬ್ಬಂದಿಯ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಪಾಲಕರಾದ ಮರಿರಾಜ ಭಜಂತ್ರಿ, ಲಕ್ಷ್ಮಿ, ಪ್ರಗತಿಪರ ಸಂಘಟನೆಯ ಸಂಚಾಲಕ ಪಾಮಣ್ಣ ಅರಳಿಗನೂರು, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಶಿವಕುಮಾರ ಈಚನಾಳ, ಮುಖ್ಯಪೇದೆಗಳಾದ ಬೈಲಪ್ಪ ಹಾಗೂ ಸಿದ್ರಾಮಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.
ಶನಿವಾರ ತಡರಾತ್ರಿ ವಸತಿ ನಿಲಯದಲ್ಲಿ ಮಕ್ಕಳು ಗಲಾಟೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಘಟನೆಗೆ ಯಾರು ಕಾರಣ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
–ಅಜ್ಜಯ್ಯ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ






