Koppal | ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ

ಕೊಪ್ಪಳ : ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಮಗ್ರ ಯೋಜನೆ ರೂಪಿಸಿ ತ್ವರಿತವಾಗಿ ಜಾರಿಗೆ ತರಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕು. ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಬೇಕು. ಪ್ರತಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ ಹಾಗೂ ತಹಶೀಲ್ದಾರರ ಕಚೇರಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ನೀಡಲು ಸಹಾಯವಾಣಿ ಕಡ್ಡಾಯವಾಗಿ ತೆರೆಯಬೇಕು ಎಂದು ಸೂಚಿಸಿದರು.
ಪ್ರತಿದಿನ ಬಂದ ದೂರುಗಳು ಹಾಗೂ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ಪ್ರತಿದಿನ ವರದಿ ಸಲ್ಲಿಸಬೇಕು. ಕೆಟ್ಟಿರುವ ಪೈಪ್‌ಲೈನ್‌ಗಳು, ಮೋಟಾರ್‌ಗಳು ಹಾಗೂ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮ ಅಥವಾ ವಾರ್ಡ್‌ನಲ್ಲಿ ನೀರಿನ ಕೊರತೆ ಉಂಟಾದರೆ ತಕ್ಷಣ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದರು.
ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಸಹಾಯವಾಣಿ ಸಂಖ್ಯೆಯನ್ನು ದೊಡ್ಡ ಅಕ್ಷರಗಳಲ್ಲಿ ಸಂಬಂಧಿತ ಕಚೇರಿಗಳಲ್ಲಿ ಫಲಕಗಳ ಮೂಲಕ ಪ್ರಕಟಿಸಬೇಕು. ಬೇಸಿಗೆ ಮುಗಿಯುವವರೆಗೆ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಸಿದರು.
ಕುಡಿಯುವ ನೀರಿನ ಪೂರೈಕೆಗಾಗಿ ಸರ್ಕಾರದಿಂದ ಗ್ರಾಮೀಣ ಪ್ರದೇಶಕ್ಕೆ 1.50 ಕೋಟಿ ರೂ., ನಗರ ಪ್ರದೇಶಗಳಿಗೆ 90 ಲಕ್ಷ ರೂ. ಮೀಸಲಿಡಲಾಗಿದೆ. ಅನುದಾನದ ಕೊರತೆ ಇಲ್ಲ. ಆದ್ದರಿಂದ ನೋಡಲ್ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಇಒಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಅಮೃತ 2.0 ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸಲು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕನಕಗಿರಿ ಉತ್ಸವದ ಲೋಗೋ ಬಿಡುಗಡೆ :
ಇದೇ ಮೇ 16 ಮತ್ತು 17ರಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಒಳಗೊಂಡ ಕನಕಗಿರಿ ಉತ್ಸವವನ್ನು ವೈಭವದಿಂದ ಆಚರಿಸಲು ಸಿದ್ಧತೆಗಳು ಆರಂಭಗೊಂಡಿದ್ದು, ಇದರ ಅಂಗವಾಗಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ಅಧಿಕೃತ ಲೋಗೋವನ್ನು ಸಚಿವ ಶಿವರಾಜ್ ಎಸ್. ತಂಗಡಗಿ ಬಿಡುಗಡೆಗೊಳಿಸಿದರು.
ಈ ವೇಳೆ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.






