ಕೊಪ್ಪಳ: ಗಣಿ, ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ಸಾಮೂಹಿಕ ವರ್ಗಾವಣೆ ಮಾಡುವಂತೆ ಸಿಎಂ ಗೆ ಪತ್ರ ಬರೆದ ಶಾಸಕ ಬಸವರಾಜ ರಾಯರಡ್ಡಿ

ಕೊಪ್ಪಳ: ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿನ ಭ್ರಷ್ಟಾಚಾರ ಕುರಿತು ಸಾರ್ವಜನಿಕರಿಂದ ದೂರುಗಳಿದ್ದು, ಆರೋಪಿತರನ್ನು ವರ್ಗಾವಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕೆಲ ಅಧಿಕಾರಿಗಳಿಗೆ ಕಾನೂನಿನ ಜ್ಞಾನವಿಲ್ಲ, ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ’ ಅವರನ್ನು ವರ್ಗಾವಣೆ ಮಾಡಬೇಕೆಂದು ಎಂದು ತಿಳಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೆಲ ಅಧಿಕಾರಿಗಳು 12–13 ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಇವರಿಂದ ಸರ್ಕಾರದ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ 10ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಾಗೂ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ದೂರು ನೀಡಲಾಗುವುದು ಎಂದು ರಾಯರಡ್ಡಿ ಹೇಳಿದ್ದಾರೆ.
ರಾಯರಡ್ಡಿ ಅವರು ಪತ್ರ ಬರೆದ ದಿನವೇ ಇಲಾಖೆಯ ಬಳ್ಳಾರಿ ವಲಯದ ಅಧಿಕಾರಿಗಳು ತಮ್ಮ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.





