Koppal | ರಸ್ತೆ ಅಪಘಾತ: ಮಹಿಳೆ ಮೃತ್ಯು

ಕೊಪ್ಪಳ: ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ ಕಾರು ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಮುನಿರಾಬಾದ್ ನಿವಾಸಿ ಪರ್ವೀನ್ ಪಿ. ಎಂದು ಗುರುತಿಸಲಾಗಿದೆ.
ಪರ್ವೀನ್ ಹಾಗೂ ಅವರ ಪತಿ ಪಿ. ರಾಜ ಸಾಬ್ ಅವರು ಮದುವೆ ಕಾರ್ಯಕ್ರಮಕ್ಕಾಗಿ ಚುಕ್ಕನಕಲ್ ಗ್ರಾಮಕ್ಕೆ ತೆರಳಿದ್ದು, ಮರಳಿ ಮನೆಗೆ ಬರುತ್ತಿದ್ದ ವೇಳೆ ಹೆದ್ದಾರಿ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪರ್ವೀನ್ ಸ್ಥಳದಲ್ಲೇ ಮೃತಪಟ್ಟಿದ್ದು, ರಾಜ ಸಾಬ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳು ರಾಜ ಸಾಬ್ ಅವರನ್ನು ತಕ್ಷಣ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ಮೇಲೆ ಮಣ್ಣು ಸುರಿದು ಪ್ರತಿಭಟನೆ ನಡೆಸಿದರು. ಇದೇ ಹೆದ್ದಾರಿಯಲ್ಲಿ ಈ ಹಿಂದೆ ಕೂಡ ಹಲವು ಅಪಘಾತಗಳು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಬಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.






