ಕೊಪ್ಪಳ |ಎಸ್‌ಐಆರ್ ಅಭಿಯಾನಕ್ಕೆ ಚಾಲನೆ

ಕುಕನೂರು, ಜೂ. 30: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಮಂಗಳವಾರ ಜಾಗೃತಿ ಜಾಥಾ ನಡೆಸಲಾಯಿತು.
ಈ ವೇಳೆ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಅವರು ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಇ ಓ ಸಂತೋಷ ಬಿರಾದರ್ ಪಾಟೀಲ, ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ತಳಹದಿಯಾಗಿದೆ. 18 ವರ್ಷ ಪೂರ್ಣಗೊಂಡ ಎಲ್ಲ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಸರು, ವಿಳಾಸ ಹಾಗೂ ಭಾವಚಿತ್ರ ತಿದ್ದುಪಡಿಗೆ ಜುಲೈ 29ರವರೆಗೆ ಅವಕಾಶವಿದ್ದು, ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪಟ್ಟಣ ಪಂಚಾಯತ್ ಕಚೇರಿಯಿಂದ ಆರಂಭವಾದ ಜಾಥಾ, ವೀರಭದ್ರಪ್ಪ ವೃತ್ತ, ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವೀರಭದ್ರಪ್ಪ ವೃತ್ತದಲ್ಲಿ ಸಮಾರೋಪಗೊಂಡಿತು.
ಬಳಿಕ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಮುಧೋಳ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿ ಭರ್ತಿ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್, ಆಹಾರ ಇಲಾಖೆಯ ಉಪ ನಿರ್ದೇಶಕ ವಿಶ್ವನಾಥಗೌಡ್ರ, ಸಿಡಿಪಿಒ ಬೆಟದೇಶ್ ಮಾಳೆಕೊಪ್ಪ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಈಶಪ್ಪ ಮ್ಯಾಳಗಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಯಲ್ಲಪ್ಪ ಕಲ್ಮನಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಬಿಎಲ್‌ಒಗಳು, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






