ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸ್ಥಗಿತ : ಜಿಲ್ಲಾಡಳಿತ ಸ್ಪಷ್ಟನೆ

ಕೊಪ್ಪಳ : ಬಿಎಸ್‌ಪಿಎಲ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ನೇತೃತ್ವದ ಸರ್ವಪಕ್ಷದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕಾರ್ಖಾನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೊಸ ಕಾರ್ಖಾನೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸಿ, ತಮಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು.
ಆದರೆ ಬಿಎಸ್‌ಪಿಎಲ್ ಕಾರ್ಖಾನೆಯ ಕಾಮಗಾರಿಗಳು ನಡೆಯುತ್ತಿದ್ದವು. ಇದರ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿತ್ತು, ಈ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ “ಸಿಎಂ ಆದೇಶಕ್ಕೆ ಕಿಮ್ಮತ್ತು ಕೊಡದ ಅಧಿಕಾರಿಗಳು” ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟೀಕರಣ ನೀಡಿದ್ದು, ಸದ್ಯ ಕಾರ್ಖಾನೆಯಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





