ಕೊಪ್ಪಳ | ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ

ಕೊಪ್ಪಳ : ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಜಿಲ್ಲಾಧಿಕಾರಿ ಮುಖಾಂತರ ಗುರುವಾರ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘಿಸಿ ಸಮಾಜಘಾತಕ ಶಕ್ತಿಗಳು ನಡೆಸುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಹಾಗೂ ಅಲ್ಪಸಂಖ್ಯಾತರಿಗೆ ವಿಶೇಷ ರಕ್ಷಣೆ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ರಾಜ್ಯದ ಕರಾವಳಿಯಲ್ಲಿ ಗೋಹತ್ಯೆ ನೆಪದಲ್ಲಿ ಅಲ್ಪಸಂಖ್ಯಾತರ ಅಮಾಯಕ ಜನರಿಗೆ ಮಾನಸಿಕ ಹಿಂಸೆ, ಹಲ್ಲೆ, ಕೊಲೆ ಮಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಜಾನುವಾರುಗಳ ರಕ್ಷಣೆ ಮಾಡುವ ನಾಟಕ ಮಾಡುತ್ತಾ ವಾಹನ ಪರಿಶೀಲನೆ ಮಾಡುವಂತಹ ಅನೈತಿಕ ಪೊಲೀಸ್ ಗಿರಿಗೆ ಅವಕಾಶ ನೀಡದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್ಜಿ, ಜಿಲ್ಲಾ ಪಾಸ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್, ಮೌಲಾನಾ ಆಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲಾ ಪಾಲಕರ ಹೋರಾಟ ಸಮಿತಿಯ ಅಧ್ಯಕ್ಷ ಮುನೀರ್ ಅಹ್ಮದ್ ಸಿದ್ದೀಕಿ, ಮಹೆಬೂಬ್ ಕುದರಿ ಮೂತಿ, ನಯೀಮ್ ಗೌರಿಪೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.







