ಕೊಪ್ಪಳ | ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಬೇಕು : ಡಿಸಿ ಸುರೇಶ ಬಿ.ಇಟ್ನಾಳ

ಕೊಪ್ಪಳ : ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಮುಂಜಾಗೃತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಸ್ತೆಗಳಲ್ಲಿ ಎಲ್ಲಾ ಕಡೆ ಬೀದಿ ದೀಪಗಳನ್ನು ಅಳವಡಿಸಬೇಕು ಮತ್ತು ಅವಶ್ಯಕತೆ ಇರುವಲ್ಲಿ ಸಿಸಿಟಿವಿಗಳನ್ನು ಹಾಕಬೇಕು. ಜೆಸ್ಕಾಂ ಅಧಿಕಾರಿಗಳು ಲೋ ಲೈನ್ ಹ್ಯಾಂಗಿಂಗ್ ವಯರುಗಳಿದ್ದರೆ ಅವುಗಳನ್ನು ಸರಿಪಡಿಸಬೇಕು. ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಶಾರ್ಟ್ ಸರ್ಕೂಟ್ ಆಗದಂತೆ ಪ್ರತಿಷ್ಠಾಪನಾ ಮಂಡಳಿಯರಿಗೆ ಈ ಕುರಿತು ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳು ತಿಳಿಸಬೇಕು. ಜಿಲ್ಲೆಯ ಆಯಾ ತಾಲ್ಲೂಕಿನ ತಹಶೀಲ್ದಾರರು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಹಂತಗಳಲ್ಲಿ ಈ ಕುರಿತು ಸಭೆಗಳನ್ನು ನಡೆಸಬೇಕೆಂದು ಹೇಳಿದರು.
ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜೆಸ್ಕಾಂ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ತಮಗೆ ವಹಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ್, ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ, ಡಿವೈಎಸ್ಪಿಗಳಾದ ಮುತ್ತಣ್ಣ ಸವರಗೋಳ, ಸಿದ್ದನಗೌಡ ಪಾಟೀಲ್, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು,. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆ ಮತ್ತು ಪರಿಸರ ಹಾಗೂ ಅರಣ್ಯ, ಪೊಲೀಸ್ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.







