Kuknoor | ಅಕ್ರಮ ಮರಳು, ಕೆರೆಯ ಮಣ್ಣು ಸಾಗಣೆ ಆರೋಪ: ಗ್ರಾಪಂ ಕಚೇರಿಗೆ ಮುತ್ತಿಗೆ

ಕುಕನೂರು : ಚಿಕ್ಕಬೀಡಿನಾಳ ಗ್ರಾಮದಲ್ಲಿ ಅಕ್ರಮವಾಗಿ ಮರಳು ಮತ್ತು ಕೆರೆಯ ಮಣ್ಣನ್ನು ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಹಿರೇಬೀಡಿನಾಳ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಮರಳು ಹಾಗೂ ಕೆರೆಯ ಮಣ್ಣನ್ನು ಸಾಗಣೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಆತಂಕವಿದೆ. ಅಕ್ರಮ ಸಾಗಣೆಯನ್ನು ತಡೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಲಿಖಿತ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇತ್ತೀಚೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಅಕ್ರಮ ಸಾಗಣೆಗೆ ಕಡಿವಾಣ ಬಿದ್ದಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಅಕ್ರಮ ಸಾಗಣೆ ತಡೆಯುವಂತೆ ಎರಡು ದಿನಗಳ ಹಿಂದೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು. ಇದರಿಂದ ಆಕ್ರೋಶಗೊಂಡಿರುವ ಅಕ್ರಮ ಸಾಗಣೆಯಲ್ಲಿ ತೊಡಗಿರುವವರು ದೂರುದಾರರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ದೂರುದಾರರಿಗೆ ರಕ್ಷಣೆ ಒದಗಿಸುವುದರ ಜತೆಗೆ ಅಕ್ರಮ ಸಾಗಣೆಯನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸಿದ್ದಹಳ್ಳಿ, ಚಿಕ್ಕಬೀಡಿನಾಳ ಗ್ರಾಮದ ಯುವಕರು ಎರಡು ದಿನಗಳ ಹಿಂದೆ ಮನವಿ ಸಲ್ಲಿಸಿರುವುದು ತಿಳಿದಿದೆ. ಅನಾರೋಗ್ಯದ ಕಾರಣ ನಾಲ್ಕು ದಿನಗಳಿಂದ ರಜೆಯಲ್ಲಿದ್ದರೂ, ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿರುವ ವಿಷಯ ತಿಳಿದ ಬಳಿಕ ಗ್ರಾಮದಲ್ಲಿ ಮಾತಿನ ಚಕಮಕಿ ನಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಜರುಗಿಸಲಾಗುವುದು ಎಂದು ಭರವಸೆ ನೀಡಿದರು.






