Kuknoor | ಬನ್ನಿಕೊಪ್ಪ ಗ್ರಾಮದಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ

ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎನ್.ಕಾಂಬ್ಳೆ ಭೇಟಿ ನೀಡಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಾಣಕ್ಕಾಗಿ ಗುರುತಿಸಲಾದ ಸ್ಥಳವನ್ನು ಸೋಮವಾರ ಪರಿಶೀಲಿಸಿದರು.
ಪರಿಶೀಲನೆ ಬಳಿಕ ಸಂಬಂಧಿಸಿದ ಸ್ಥಳದ ಕುರಿತು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮರು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ನಾಲಾ ಸುಧಾರಣೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದರು. ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸಮರ್ಪಕವಾಗಿ ಉದ್ಯೋಗಾವಕಾಶ ಕಲ್ಪಿಸಲು ಎಲ್ಲ ಗ್ರಾಮ ಪಂಚಾಯತ್‌ಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದರ್ ಪಾಟೀಲ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಶುರಾಮ ನಾಯಕ್, ಲಕ್ಷ್ಮಣ ಕೆರೆಹಳ್ಳಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.




