ಸೆ.12ರಂದು ಕೊಪ್ಪಳದಲ್ಲಿ ಖಾಸಗಿ ಶಾಲಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಕೊಪ್ಪಳ: ಕರ್ನಾಟಕ ಪಬ್ಲಿಕ್ ಸ್ಕೂಲ್ಸ್ ಅಸೋಸಿಯೇಷನ್ (ಕೆಪಿಎಸ್‌ಎ) ಕೊಪ್ಪಳ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೆಪ್ಟೆಂಬರ್ 12ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಗಿರೀಶ್ ಕಣವಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಕೊಪ್ಪಳ ಸಂಸ್ಥಾನ ಶ್ರೀ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ಭಾಗ್ಯನಗರದ ಶ್ರೀ ಶಾರದಾಂಬ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಶ್ರೀ ಶಿವರಾಮಕೃಷ್ಣಾನಂದ ಭಾರತಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಿದ್ದು, ಮಾಜಿ ಸಂಸದ ಸಂಗಣ್ಣ ಕರಡಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಮಾಜಿ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎ. ಚಂದ್ರಶೇಖರ, ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾಟರ್, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಲೂರು, ಸಮಾಜಸೇವಕ ವೆಂಕಟೇಶ ಬಾರಕೇರ ಸೇರಿದಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅನಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಶಿಕ್ಷಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಜಿಲ್ಲೆಯ ಖಾಸಗಿ ಶಾಲೆಗಳ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗಿರೀಶ್ ಕಣವಿ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಮುಖಂಡರಾದ ಪ್ರಹ್ಲಾದ ಅಗಳಿ, ಶಿವಕುಮಾರ್ ಕುಕುನೂರು, ನಿತೀಶ್ ಕುಮಾರ್ ಪುಲಸ್ಕರ್ ಹಾಗೂ ಜಿಲ್ಲಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.






