ಪ್ರವೇಶಾತಿ ಶುಲ್ಕ ಹೆಚ್ಚಳ ಹಿಂಪಡೆಯದಿದ್ದರೆ ಕೊಪ್ಪಳ ವಿವಿಗೆ ಮುತ್ತಿಗೆ: ಎಸ್‌ಎಫ್‌ಐ ಎಚ್ಚರಿಕೆ

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳ ಪದವಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕವನ್ನು ಕೂಡಲೇ ಕಡಿತಗೊಳಿಸಬೇಕು. ಇಲ್ಲವಾದರೆ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ.
ಗುರುವಾರ ಎಸ್‌ಎಫ್‌ಐ ಕಾರ್ಯಕರ್ತರು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಬಿ. ಡಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಪ್ರವೇಶಾತಿ ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಶಿಕ್ಷಣವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಪ್ರವೇಶಾತಿ ಶುಲ್ಕ ಹೆಚ್ಚಳದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಗ್ರಾಮೀಣ, ರೈತ, ಕಾರ್ಮಿಕ, ದಲಿತ, ಹಿಂದುಳಿದ, ಆದಿವಾಸಿ ಹಾಗೂ ಅಲ್ಪಸಂಖ್ಯಾತ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಇದು ಅಡ್ಡಿಯಾಗಲಿದೆ ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಯು. ಮಾತನಾಡಿ, ಈಗಾಗಲೇ ಕಾಲೇಜು ಶುಲ್ಕ, ಪರೀಕ್ಷಾ ಶುಲ್ಕ, ಪುಸ್ತಕ, ವಸತಿ ಹಾಗೂ ಸಾರಿಗೆ ವೆಚ್ಚಗಳು ಹೆಚ್ಚಾಗಿವೆ. ಇಂತಹ ಸಂದರ್ಭದಲ್ಲಿ ಪ್ರವೇಶಾತಿ ಶುಲ್ಕ ಹೆಚ್ಚಿಸಿರುವುದು ನ್ಯಾಯಸಮ್ಮತವಲ್ಲ. ಇದರಿಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಕೈಬಿಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಮುಖಂಡ ಶರೀಫ್ ಎಂ.ಪಿ. ಮಾತನಾಡಿ, ಶುಲ್ಕ ಹೆಚ್ಚಳದಂತಹ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ವಿದ್ಯಾರ್ಥಿಗಳ ಅಭಿಪ್ರಾಯವನ್ನು ಪರಿಗಣಿಸದೆ ಏಕಪಕ್ಷೀಯವಾಗಿ ಶುಲ್ಕ ಹೆಚ್ಚಿಸಿರುವುದು ಖಂಡನೀಯ ಎಂದು ಹೇಳಿದರು.
ಪ್ರವೇಶಾತಿ ಶುಲ್ಕ ಹೆಚ್ಚಳದ ಆದೇಶವನ್ನು ತಕ್ಷಣ ಹಿಂಪಡೆದು ಹಿಂದಿನ ಶುಲ್ಕವನ್ನೇ ಮುಂದುವರಿಸಬೇಕು. ಇಲ್ಲವಾದರೆ ಎಸ್‌ಎಫ್‌ಐ ಜಿಲ್ಲಾ ಸಮಿತಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಯು., ಶರೀಫ್ ಎಂ.ಪಿ., ವಿದ್ಯಾರ್ಥಿಗಳಾದ ಭೀಮಪ್ಪ, ಕಮಲೇಶ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.






