ಮಾದಕ ವಸ್ತುಗಳಿಂದ ದೂರವಿರಿ : ವಿದ್ಯಾರ್ಥಿಗಳಿಗೆ ಕುಕನೂರು ಪೊಲೀಸರಿಂದ ಜಾಗೃತಿ

ಕುಕನೂರು : ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕುಕನೂರು ಪೊಲೀಸ್ ಠಾಣೆ ವತಿಯಿಂದ ಬುಧವಾರ ತಾಲೂಕಿನ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕೆಎಲ್‌ಇ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪಿಎಸ್‌ಐ ಎಸ್.ಪಿ. ನಾಯ್ಕ್, ಮಾದಕ ವಸ್ತುಗಳ ವ್ಯಸನವು ಯುವಜನರ ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಸ್ನೇಹಿತರ ಒತ್ತಡ ಅಥವಾ ಕುತೂಹಲಕ್ಕೆ ಒಳಗಾಗಿ ಯಾವುದೇ ಮಾದಕ ವಸ್ತುಗಳ ಸೇವನೆ ಮಾಡಬಾರದು ಎಂದು ಸಲಹೆ ನೀಡಿದರು.
ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ, ಮಾರಾಟ ಅಥವಾ ಬಳಕೆಯ ಕುರಿತು ಮಾಹಿತಿ ದೊರೆತರೆ ತಕ್ಷಣವೇ ಪೊಲೀಸ್ ಇಲಾಖೆಗೆ ತಿಳಿಸಬೇಕು. ಸಮಾಜವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ, ಸಂಬಂಧಿತ ಕಾನೂನುಗಳು ಹಾಗೂ ವ್ಯಸನದಿಂದ ಉಂಟಾಗುವ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಮಾಹಿತಿ ನೀಡಲಾಯಿತು.
ಶಾಲೆ ಹಾಗೂ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ಪೊಲೀಸ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






