ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಕೊಪ್ಪಳದಲ್ಲಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಪ್ರತಿಭಟನೆ
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ

ಕೊಪ್ಪಳ : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು ಹಾಗೂ ಹೋರಾಟಗಾರರ ಬಂಧನ ಮತ್ತು ಪೊಲೀಸ್ ಕ್ರಮವನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ, ಯುವಜನ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಎಸ್‌ಐಆರ್ ವಿರೋಧಿ ಹೋರಾಟದ ಸಂದರ್ಭದಲ್ಲಿ 7 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.
ಎಸ್‌ಎಫ್‌ಐ, ಡಿವೈಎಫ್‌ಐ, ಎಐಡಿವೈಒ, ಎಐಡಿಎಸ್‌ಒ ಹಾಗೂ ಕೆವಿಎಸ್ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕವಿದೆ. ಬಡವರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಆದಿವಾಸಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ. ಹೀಗಾಗಿ, ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಇಬ್ಬರು ಚುನಾವಣಾ ಆಯುಕ್ತರ ಅಭಿಪ್ರಾಯಗಳನ್ನು ಕಡೆಗಣಿಸಿ ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಹೋರಾಟಗಾರರನ್ನು ಬಂಧಿಸುವ ಮೂಲಕ ಜನರ ಆಕ್ರೋಶವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.
ಎಐಡಿಎಸ್‌ಒ ಕಾರ್ಯಕರ್ತೆ ಸಿಂಧೂ ಕೌದಿ ಮಾತನಾಡಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕಲಾಗಿದೆ ಎಂದು ಆರೋಪಿಸಿ, ಈ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿ-ಯುವಜನರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.
ಕೆವಿಎಸ್ ಸಂಘಟನೆಯ ದುರ್ಗೇಶ್ ಮಾತನಾಡಿ, ಎಸ್‌ಐಆರ್ ರದ್ದತಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಸಂಜೀವ್ ಮೂರ್ತಿ ಗುಡದಳ್ಳಿ, ಅನಿಲ್ ಕೊಪ್ಪಳ, ಶಿವಮೂರ್ತಿ ವದಗನಾಳ, ಗವಿ ಕುಣಿಕೇರಿ, ಯಮನೂರ, ಯಮುನಾ ಚೆಳ್ಳೂರು, ಸಂಜಿತ ರಾಯಚೂರು, ವೀರೇಶ್ ಗೊರೆಬಾಳ ಹಾಗೂ ಶ್ರೀನಿವಾಸ್ ಹೊಸಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.






