ಟಿಬಿ ಡ್ಯಾಮ್ ಗೇಟ್ ಅಳವಡಿಕೆ ಕಾಮಗಾರಿ ಪೂರ್ಣ : ಸಚಿವ ರಾಮಲಿಂಗಾರೆಡ್ಡಿ

ಕೊಪ್ಪಳ: ರಾಜ್ಯದ ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ತುಂಗಭದ್ರಾ ಜಲಾಶಯಕ್ಕೆ ಹೊಸದಾಗಿ ಅಳವಡಿಸಲಾದ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.
ಮುನಿರಾಬಾದ್ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ವೇದಿಕೆ, ರಸ್ತೆ ಸಂಪರ್ಕ, ಬ್ಯಾರಿಕೇಡ್ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ವೀಕ್ಷಿಸಿದ ಸಚಿವರು, ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ತಾವು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಹಾದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಕಳೆದ ವರ್ಷ ತುಂಗಭದ್ರಾ ಡ್ಯಾಮ್‌ನ 19ನೇ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಎಲ್ಲಾ ಹಳೆಯ ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಸುಮಾರು 51 ಕೋಟಿ ರೂಪಾಯಿ ವೆಚ್ಚವಾಗಿದೆ. ಹೊಸ ಗೇಟ್‌ಗಳು 55 ರಿಂದ 60 ವರ್ಷಗಳವರೆಗೆ ಬಾಳಿಕೆ ಬರಲಿವೆ ಎಂದು ಹೇಳಿದರು.
ಹೊಸ ಗೇಟ್‌ಗಳ ಲೋಕಾರ್ಪಣೆ ಸಮಾರಂಭಕ್ಕೆ ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿ ಜಲಾಶಯದ ನೀರಿನ ಹಂಚಿಕೆ, ಅಂತಾರಾಜ್ಯ ನೀರಾವರಿ ಸಮಸ್ಯೆಗಳು ಹಾಗೂ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಅಂತಾರಾಜ್ಯ ನದಿ ನೀರಿನ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಲು ಇದು ಸೂಕ್ತ ಸಮಯವಾಗಿದ್ದು, ಮೂರು ರಾಜ್ಯಗಳ ಸಹಮತದೊಂದಿಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ವಿಶ್ವಾಸವಿದೆ. ಯಾವುದೇ ಭಾಗದ ಜನತೆಗೆ ಅನ್ಯಾಯವಾಗದಂತೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಈ ವೇಳೆ ಸಂಸದರಾದ ರಾಜಶೇಖರ ಹಿಟ್ನಾಳ, ಮುಖಂಡರಾದ ಅಮರೇಶ ಕರಡಿ, ಬಳ್ಳಾರಿ ವಲಯದ ಐಜಿಪಿ ಡಾ.ಪಿ ಎಸ್ ಹರ್ಷ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹಾಗೂ ಇತರರು ಇದ್ದರು.






