ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ಆಂದೋಲನದ ರೂಪ ನೀಡಿ : ಸಚಿವ ಮಧು ಬಂಗಾರಪ್ಪ
ಜಿಲ್ಲಾ ಮಟ್ಟದ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ: ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ದಾಖಲಾತಿ ಹೆಚ್ಚಳವನ್ನು ಅಧಿಕಾರಿಗಳು ಒಂದು ಆಂದೋಲನದಂತೆ ಪರಿಗಣಿಸಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ನವೆಂಬರ್ 20ರಂದು ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದನೇ ತರಗತಿಯ ದಾಖಲಾತಿ ವಯೋಮಿತಿ ನಿಯಮದಲ್ಲಿನ ಬದಲಾವಣೆಯಿಂದಾಗಿ ಕಳೆದ ಸಾಲಿಗಿಂತ ಈ ಬಾರಿ ಸುಮಾರು 6,000 ಮಕ್ಕಳ ದಾಖಲಾತಿ ಕಡಿಮೆಯಾಗಿರುವ ಕುರಿತು ಸಭೆಯಲ್ಲಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದಿಂದ ಉಚಿತ ವಿದ್ಯುತ್, ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಅತಿಥಿ ಶಿಕ್ಷಕರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೂ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗದಿದ್ದರೆ ಜನರಲ್ಲಿ ಸರ್ಕಾರದ ಮೇಲಿನ ವಿಶ್ವಾಸ ಕಡಿಮೆಯಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಆರಂಭಿಸಲಾಗಿರುವ 203 ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಹೆಚ್ಚಿನ ಮಕ್ಕಳನ್ನು ದಾಖಲಿಸಿಕೊಳ್ಳುವ ಮೂಲಕ ಒಂದನೇ ತರಗತಿಯ ದಾಖಲಾತಿ ಸಹಜವಾಗಿಯೇ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಪರೀಕ್ಷೆಗೆ ಗೈರಾದ ಮಕ್ಕಳ ಮನೆಗೆ ಭೇಟಿ ನೀಡಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರೂ ಸುಮಾರು 1,631 ಮಕ್ಕಳು ಪರೀಕ್ಷೆಗೆ ಗೈರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಪರೀಕ್ಷಾ ಸಮಯದಲ್ಲಿ ಶಿಕ್ಷಕರು ಮತ್ತು ಅಧಿಕಾರಿಗಳು ಗೈರಾಗುವ ಮಕ್ಕಳ ಮನೆಗಳಿಗೆ ಖುದ್ದು ಭೇಟಿ ನೀಡಿ, ಪೋಷಕರ ಮನವೊಲಿಸಿ ಮಕ್ಕಳಿಗೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದು ಸೂಚಿಸಿದರು.
ಇದರ ಜೊತೆಗೆ ದ್ವಿತೀಯ ಪಿಯುಸಿಯಲ್ಲಿ ‘ಮಿಷನ್ 60’ ಗುರಿ ತಲುಪಲು ವಿಶೇಷ ತರಗತಿಗಳನ್ನು ನಡೆಸಬೇಕು. ಮೌಲ್ಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳ ಪೋಷಕರು ಮತ್ತು ಶಿಕ್ಷಕರ ಸಭೆಗಳನ್ನು ನಿಯಮಿತವಾಗಿ ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಮುಂದಿನ ಜೂನ್‌ನಿಂದ ಕೆಪಿಎಸ್ ಮಕ್ಕಳಿಗೆ ಪ್ರತ್ಯೇಕ ಉಚಿತ ಬಸ್
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಒಂದೇ ಸೂರಿನಡಿ 14 ವರ್ಷಗಳ ಸಮಗ್ರ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಬಸ್‌ಗಳಲ್ಲಿ ಮಕ್ಕಳಿಗೆ ಉಂಟಾಗುತ್ತಿರುವ ಸಮಯದ ವ್ಯತ್ಯಯ ತಪ್ಪಿಸಲು ಮುಂದಿನ ಜೂನ್ ತಿಂಗಳಿನಿಂದ ಕೆಪಿಎಸ್ ಶಾಲಾ ಮಕ್ಕಳಿಗಾಗಿಯೇ ಸರ್ಕಾರದಿಂದ ಪ್ರತ್ಯೇಕ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 12ನೇ ತರಗತಿಯವರೆಗಿನ ಎಲ್ಲ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಿಸಲಾಗುವುದು. ಪಠ್ಯಪುಸ್ತಕಗಳ ಭಾಗ-1 ಮತ್ತು ಭಾಗ-2ನ್ನು ಒಟ್ಟಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶೇಖರಪ್ಪ ಹೊರಪೇಟಿ ಮಾತನಾಡಿ, ಜಿಲ್ಲೆಯಲ್ಲಿ 1,143 ಸರ್ಕಾರಿ, 65 ಅನುದಾನಿತ ಹಾಗೂ 452 ಅನುದಾನರಹಿತ ಸೇರಿದಂತೆ ಒಟ್ಟು 1,660 ಶಾಲೆಗಳಿವೆ. ಸರ್ಕಾರಿ ಶಾಲೆಗಳಲ್ಲಿ 1,67,628 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 21,433 ವಿದ್ಯಾರ್ಥಿಗಳು ಹಾಜರಾಗಿದ್ದು, ಪೂರಕ ಪರೀಕ್ಷೆ ಸೇರಿ ಒಟ್ಟು 21,045 ಮಕ್ಕಳು ಉತ್ತೀರ್ಣರಾಗುವ ಮೂಲಕ ಶೇ.98.19ರಷ್ಟು ಫಲಿತಾಂಶ ದಾಖಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 49 ಕೆಪಿಎಸ್ ಶಾಲೆಗಳ ಪೈಕಿ 26 ಶಾಲೆಗಳಿಗೆ ಕೆಕೆಆರ್‌ಡಿಬಿ ಹಾಗೂ 14 ಶಾಲೆಗಳಿಗೆ ಎಡಿಬಿ ಅನುದಾನ ಮಂಜೂರಾಗಿದೆ. ವಿವಿಧ ಯೋಜನೆಗಳಡಿ 138 ಶೌಚಾಲಯಗಳು ಹಾಗೂ 58 ಹೊಸ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಶಾಲೆಯಿಂದ ಹೊರಗುಳಿದ 1,118 ಮಕ್ಕಳಲ್ಲಿ 408 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ ಎಂದು ವಿವರಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 53 ಸರ್ಕಾರಿ ಸೇರಿದಂತೆ ಒಟ್ಟು 123 ಪಿಯು ಕಾಲೇಜುಗಳಿವೆ. ಕಳೆದ ಸಾಲಿಗಿಂತ ಈ ಬಾರಿ 5,048 ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿದ್ದು, ಒಟ್ಟು 34,846 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಪೈಕಿ ವಿಜ್ಞಾನ ವಿಭಾಗದ ದಾಖಲಾತಿಯಲ್ಲಿ ಶೇ.20ರಷ್ಟು ವೃದ್ಧಿಯಾಗಿದೆ ಎಂದು ತಿಳಿಸಿದರು.
ಕಳೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.86.80ರಷ್ಟು ಫಲಿತಾಂಶದೊಂದಿಗೆ ಕಲ್ಯಾಣ ಕರ್ನಾಟಕ ವಿಭಾಗದಲ್ಲೇ ಕೊಪ್ಪಳ ಪ್ರಥಮ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಶೇ.40ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಆಯ್ದ ಏಳು ಕಾಲೇಜುಗಳಲ್ಲಿ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ. ಖಾಲಿ ಹುದ್ದೆಗಳಿಗೆ 252 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಪ್ರಾಚಾರ್ಯ ಎಲ್.ಡಿ. ಜೋಶಿ ಮಾತನಾಡಿ, ಯೂಟ್ಯೂಬ್ ಲೈವ್ ಮೂಲಕ ಶಿಕ್ಷಕರಿಗೆ ಪಾಠ ಆಧಾರಿತ ಮೌಲ್ಯಮಾಪನ ತರಬೇತಿ ನೀಡಲಾಗಿದ್ದು, ಜಿಲ್ಲೆಯ ಶೇ.95ರಷ್ಟು ಸರ್ಕಾರಿ ಶಾಲೆಗಳು ಇದನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿವೆ ಎಂದು ತಿಳಿಸಿದರು.
ದ್ವಿಭಾಷಾ ತರಗತಿಗಳ ವೀಕ್ಷಣೆ ನಡೆಸಲಾಗುತ್ತಿದ್ದು, ಶಿಕ್ಷಕರು ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಆತ್ಮವಿಶ್ವಾಸ ಬೆಳೆಸಿಕೊಂಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ 10 ಶೈಕ್ಷಣಿಕ ಸಂಶೋಧನೆಗಳನ್ನು ಕೈಗೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಜಿಲ್ಲಾ ಡಯಟ್ ಕಾಲೇಜಿನಲ್ಲಿ ಕಲಬುರಗಿ ವಿಭಾಗದಲ್ಲೇ ಅತಿ ಹೆಚ್ಚು ಅಂದರೆ 89 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಳೆದ ಐದು ವರ್ಷಗಳಿಂದ ಶೇ.100ರಷ್ಟು ಫಲಿತಾಂಶ ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಸೇರಿದಂತೆ ಬಿಇಒಗಳು, ಪ್ರಾಚಾರ್ಯರು ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.






