ಕಬ್ಬು ದರ ಹೆಚ್ಚಳಕ್ಕೆ ಒತ್ತಾಯಿಸಿ ಅ.23ರಂದು ಮಂಡ್ಯ ರಾಷ್ಟ್ರೀಯ ಹೆದ್ದಾರಿ ಬಂದ್ : ಬಡಗಲಪುರ ನಾಗೇಂದ್ರ

ಮಂಡ್ಯ, ಅ.19: ಕಬ್ಬಿನ ಉತ್ಪಾದನಾ ವೆಚ್ಚ ಅಧಿಕವಾಗಿರುವ ಹಿನ್ನೆಲೆಯಲ್ಲಿ ಟನ್ ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕು, ಕೇಂದ್ರ ಸರಕಾರ ಎಫ್‌ಆರ್‌ಪಿ ಹಾಗೂ ರಾಜ್ಯ ಸರಕಾರ ಎಸ್‌ಎಪಿ ನಿಗದಿ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.23ರಂದು ಹಳೇ ಮೈಸೂರು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.23ರಂದು ಬೆಳಗ್ಗೆ 11 ಗಂಟೆಯಿಂದ ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ರೈತರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ರೈತರು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸರಕಾರಗಳಿಗೆ ಹಲವು ಬಾರಿ ಮನವಿ ಸಲ್ಲಿಸಿ ಗಮನ ಸೆಳೆದಿದ್ದರೂ ಸ್ಪಂದಿಸಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ರಸಗೊಬ್ಬರ ಸೇರಿದಂತೆ ಇತರ ಉತ್ಪಾದನಾ ವೆಚ್ಚಗಳು ಹೆಚ್ಚಾಗುತ್ತಿದ್ದರೂ, ಅದಕ್ಕೆ ತಕ್ಕಂತೆ ಕಬ್ಬಿನ ಬೆಲೆ ಹೆಚ್ಚಳವಾಗುತ್ತಿಲ್ಲ. ಹೀಗಾಗಿ ಕಬ್ಬಿನ ಬೆಲೆ ನಿಗದಿ ಮಾನದಂಡವನ್ನು ಪರಿಷ್ಕರಿಸಿ ಟನ್ ಕಬ್ಬಿಗೆ 5,500 ರೂ. ನೀಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಕಬ್ಬು ಬೆಳೆಗಾರರ ರಕ್ಷಣೆಗೆ ಎಂಎಸ್ಪಿ ಹಾಗೂ ಎಸ್‌ಎಪಿ ನಿಗದಿಪಡಿಸಲು ಮತ್ತು ಈ ಸಂಬಂಧ ಬಜೆಟ್ ನಲ್ಲಿ ಹಣ ಮೀಸಲಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.,
ಸುದ್ದಿಗೋಷ್ಠಿಯಲ್ಲಿ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರೈತ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಕೆಂಪೂಗೌಡ, ಕೆ.ಗೋವಿಂದೇಗೌಡ, ಬೋರಾಪುರ ಶಂಕರೇಗೌಡ, ಇತರ ಮುಖಂಡರು ಉಪಸ್ಥಿತರಿದ್ದರು.






