ನನಗೂ ಬೆದರಿಕೆ ಕರೆಗಳು ಬಂದಿವೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ನನಗೂ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾ ಪಟ್ಟಣದಲ್ಲಿ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಅವರು ಮಾತನಾಡುತ್ತಿದ್ದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನನಗೂ ಬೆದರಿಕೆ ಕರೆಗಳು ಬರುತ್ತವೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿ, ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕೊಲೆಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ)ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.







