ಮಂಡ್ಯ | ರಸ್ತೆಬದಿಗೆ ಉರುಳಿದ ಸಾರಿಗೆ ಬಸ್; 33 ಮಂದಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆಬದಿಗೆ ಉರುಳಿದ ಪರಿಣಾಮ ಸುಮಾರು 33 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ಮದ್ದೂರು ತಾಲೂಕು ರುದ್ರಾಕ್ಷಿಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೂರ್ನಾಲ್ಕು ಪ್ರಯಾಣಿಕರಿಗೆ ತೀವ್ರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡವರನ್ನು ಮಿಮ್ಸ್ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಉಳಿದವರಿಗೆ ಮದ್ದೂರಿನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಮರಾಜನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಢಿಕ್ಕಿಯಾಗಿ ರಸ್ತೆ ಪಕ್ಕಕ್ಕೆ ಉರುಳಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಗಮಧ್ಯೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು.





