ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ

ಮಂಡ್ಯ : ಭಾರಿ ಪೈಪೋಟಿಯ ನಡುವೆ ದೀರ್ಘಾವಧಿಯ ನಂತರ, ದಲಿತ ಮುಖಂಡನಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ವರಿಷ್ಠ ಹುದ್ದೆ ಒಲಿದು ಬಂದಿದೆ. ಕುಮಾರ್ ಕೊಪ್ಪ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧಪಟ್ಟ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರ ಪ್ರಮುಖರೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿ ಅಭಿಪ್ರಾಯ ಪಡೆದು ಪಕ್ಷದ ವರಿಷ್ಠರಿಗೆ ಸಮಗ್ರ ವರದಿಗಳನ್ನು ಸಲ್ಲಿಸಿದ್ದರು.
ಹಾಲಿ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಪಕ್ಷದ ಜಿಲ್ಲಾ ವಕ್ತಾರ ಸಿ..ಎಂ.ದ್ಯಾವಪ್ಪ ಸೇರಿದಂತೆ ಹಲವು ಮುಖಂಡರು ಜಿಲ್ಲಾಧ್ಯಕ್ಷರ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ, ಹೈಕಮಾಂಡ್ ದಲಿತ ಮುಖಂಡ ಕುಮಾರ್ ಕೊಪ್ಪ ಅವರಿಗೆ ಪಟ್ಟ ಕಟ್ಟುವ ಮೂಲಕ ಅಚ್ಚರಿ ಮೂಡಿಸಿದೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಕುಮಾರ್ ಅವರು, ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಅತ್ಯಾಪ್ತರಾಗಿದ್ದಾರೆ. ಮದ್ದೂರು ತಾಲೂಕು ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ರಾಪಂ ಮಾಜಿ ಸದಸ್ಯರು, ನಾಗಮಂಗಲ ತಾಲೂಕು ಕಾಂಗ್ರೆಸ್ ಉಪಾಧ್ಯಕ್ಷ, ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರು, ಪು.ತಿ.ನ. ಟ್ರಸ್ಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮನ್ ಮುಲ್ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ತಮ್ಮ ಆಯ್ಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕುಮಾರ್ ಕೊಪ್ಪ, ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಎಲ್ಲರ ಮಾರ್ಗದರ್ಶನದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭಾ ಚುನಾವಣೆಗೆ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಚಲುವರಾಯಸ್ವಾಮಿ ಅಭಿನಂದನೆ:
ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ಅವರನ್ನು ನೇಮಕ ಮಾಡಿರುವುದು ಅತ್ಯಂತ ಸಂತಸದ ವಿಷಯ ಎಂದು ತಿಳಿಸಿರುವ ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ, ಇದಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯಕ್ಕೆ ನೀಡಿರುವ ಮಹತ್ವವನ್ನು ಇದು ಮತ್ತೊಮ್ಮೆ ಸಾಬೀತುಪಡಿಸಿದೆ. ದಲಿತ ಸಮುದಾಯದ ನಿಷ್ಠಾವಂತ ಕಾರ್ಯಕರ್ತರೊಬ್ಬರನ್ನು ಗುರುತಿಸಿ ಜಿಲ್ಲಾ ಅಧ್ಯಕ್ಷರಂತಹ ಮಹತ್ವದ ಜವಾಬ್ದಾರಿ ನೀಡಿರುವುದು ಪಕ್ಷದ ಸಾಮಾಜಿಕ ಬದ್ಧತೆಗೆ ಸಾಕ್ಷಿ. ಈ ಹಿಂದೆ ದಲಿತ ಸಮುದಾಯದ ಚಿಕ್ಕಲಿಂಗಮ್ಮ ಅವರು ಈ ಹುದ್ದೆಯನ್ನು ಅಲಂಕರಿಸಿದ್ದನ್ನು ಬಿಟ್ಟರೆ, ಇತ್ತೀಚಿನ ವರ್ಷಗಳಲ್ಲಿ ಈ ಸಮುದಾಯಕ್ಕೆ ಈ ಅವಕಾಶ ಸಿಕ್ಕಿರಲಿಲ್ಲ. ಈ ಕೊರತೆಯನ್ನು ನಮ್ಮ ಹೈಕಮಾಂಡ್ ಈಗ ನೀಗಿಸಿದೆ, ಇದಕ್ಕೆ ನನಗೆ ಅತೀವ ಖುಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.






