ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚಿಸಿ : ಸಚಿವ ಯತೀಂದ್ರ ಸಿದ್ದರಾಮಯ್ಯ
ಒವೆಲ್ ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು : ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಕನ್ನಡವನ್ನು ಬೆಳೆಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ನಗರದ ಐತಿಹಾಸಿಕ ಒವೆಲ್ ಮೈದಾನದಲ್ಲಿ ರವಿವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಗುಣಮಟ್ಟದ ಡಿಜಿಟಲ್ ಪುಸ್ತಕಗಳು, ಶೈಕ್ಷಣಿಕ ವೀಡಿಯೊಗಳು, ಆನ್‌ಲೈನ್ ಪಾಠಗಳು ಹಾಗೂ ತಂತ್ರಜ್ಞಾನ ಆಧಾರಿತ ಕಲಿಕಾ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ವಿಜ್ಞಾನ, ವೈದ್ಯಕೀಯ, ಕಾನೂನು ಮತ್ತು ಆಡಳಿತ ಕ್ಷೇತ್ರಗಳಿಗೆ ಸಂಬಂಧಿಸಿದ ಮಾಹಿತಿಯು ಕನ್ನಡದಲ್ಲಿ ಸುಲಭವಾಗಿ ಲಭ್ಯವಾಗಬೇಕು. ಯುವಜನರು ಕನ್ನಡ ಭಾಷೆಯ ಮೂಲಕ ಹೊಸ ಆವಿಷ್ಕಾರ, ಸಂಶೋಧನೆ ಹಾಗೂ ಉದ್ಯಮಶೀಲತೆಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ :
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭಾಷೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ.ಸುದರ್ಶನ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಿರಿಯರು ಉಪಸ್ಥಿತರಿದ್ದರು.






