ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ: ಕಾರ್ಯ ಬಸವಣ್ಣ ಒತ್ತಾಯ

ಕಾರ್ಯ ಬಸವಣ್ಣ
ಮೈಸೂರು: ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡುವುದು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ, ಅದು ಸಂವಿಧಾನದ ಮೌಲ್ಯಗಳನ್ನೇ ಅವಮಾನಿಸಿದಂತಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ಕಳೆದ ಎರಡು–ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಹಾಗೂ ಫೇಸ್ಬುಕ್ನಲ್ಲಿ ವೇದಮೂರ್ತಿ ಎಂಬ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್, ಸಂವಿಧಾನ ಹಾಗೂ ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಹಗುರವಾದ ಹೇಳಿಕೆಗಳನ್ನು ನೀಡಿದ್ದಾರೆ. ಈತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯಿಲ್ಲದೆ ರಾಷ್ಟ್ರನಾಯಕರು, ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ವ್ಯವಸ್ಥೆಯ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದರಿಂದ ಸಮಾಜದಲ್ಲಿ ಅಶಾಂತಿ ಹಾಗೂ ದ್ವೇಷದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಆದ್ದರಿಂದ ಇಂತಹ ಹೇಳಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಸಂವಿಧಾನ ಹಾಗೂ ರಾಷ್ಟ್ರದ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ಮರುಕಳಿಸದಂತೆ ಸರ್ಕಾರ ಜಾಗೃತಿ ಮೂಡಿಸುವುದರ ಜೊತೆಗೆ, ಸಾಮಾಜಿಕ ಜಾಲತಾಣಗಳ ದುರುಪಯೋಗದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಂಡು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ಮತ್ತು ಅವುಗಳಿಗೆ ಬೆಂಬಲವನ್ನು ನೀಡಿ ಕಾಮೆಂಟ್ ಮಾಡುತ್ತಿರುವವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು. ಸಂವಿಧಾನದ ಆಶಯಗಳನ್ನು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ ಮಹನೀಯರ ಕೊಡುಗೆಯನ್ನು ಗೌರವಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.






