ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಜಾಗೃತಿ ಕಾರ್ಯಕ್ರಮ; ಮೈಸೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಜಟಾಪಟಿ

ಮೈಸೂರು : ನಗರದ ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆ ಸಂಬಂಧ ಆಯೋಜಿಸಿದ್ದ ಕಾರ್ಯಕ್ರಮ ಕಾಂಗ್ರೆಸ್ ಹಾಗೂ ಬಿಜೆಪಿಯ ವಾಕ್ಸಮರ ಜಟಾಪಟಿಯ ವೇದಿಕೆಯಾಗಿ ಪರಿಣಮಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು.
ಮಹಾರಾಣಿ ಕಾಲೇಜಿನಲ್ಲಿ ಮಧ್ಯಾಹ್ನ 3 ಗಂಟೆಗೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎನ್ನಲಾಗಿದೆ. ಆದರೆ, ಉಪನ್ಯಾಸ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹಾಗೂ ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿಗಳ ಬ್ಯಾನರ್ ಅನ್ನು ಹಾಕಲಾಗಿತ್ತು. ಈ ಮಾಹಿತಿ ಮೇರೆಗೆ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ನೇತೃತ್ವದಲ್ಲಿ ಸ್ಥಳಕ್ಕಾಗಮಿಸಿದ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು, ಸರಕಾರಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳನ್ನು ಬಲವಂತವಾಗಿ ಪ್ರತಿಭಟನೆಗೆ ಕರೆ ತರಲಾಗುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತ್ಯತ್ತರವಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡಿಕೊಡುವಂತೆ ಪಟ್ಟು ಹಿಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿಯಿಂದಾಗಿ ಸ್ಥಳದಲ್ಲಿ ಗಂಟೆಗೂ ಹೆಚ್ಚು ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಇದೇ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಕೆ.ಹರೀಶ್‌ಗೌಡ ಹಾಗೂ ಎಲ್.ನಾಗೇಂದ್ರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪರಿಸ್ಥಿತಿ ಅರಿತ ಕಾಲೇಜು ಆಡಳಿತ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಬ್ಯಾನರ್ ಅನ್ನು ತೆರವುಗೊಳಿಸಿದರು. ಅಲ್ಲದೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಬಂಧನ-ಬಿಡುಗಡೆ: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಬ್ಯಾರಿಕೇಡ್‌ಗಳನ್ನು ಅಳವಡಿಸಿ ಕಾಲೇಜಿನೊಳಗೆ ಯಾರಿಗೂ ಪ್ರವೇಶ ನೀಡದಂತೆ ತಡೆದರಲ್ಲದೆ ಪ್ರತಿಭಟನಾ ನಿರತ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಸಹಿತ ಕೆಲವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಿಲ್ಲ. ರಾಹುಲ್ ಗಾಂಧಿ ಫೋಟೊ ಕೂಡ ಹಾಕಿಲ್ಲ. ಅದಾಗ್ಯೂ ಬಿಜೆಪಿ ನಾಯಕರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
-ಕೆ.ಹರೀಶ್‌ಗೌಡ, ಶಾಸಕ, ಮೈಸೂರು
ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಪ್ರಚೋದಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆತರಲಾಗುತ್ತಿದೆ. ಆತ್ಮಹತ್ಯೆಗೆ ಶರಣಾದ ಅಮಾಯಕ ವಿದ್ಯಾರ್ಥಿಗಳ ಶ್ರದ್ಧಾಂಜಲಿಯಲ್ಲಿ ರಾಹುಲ್ ಗಾಂಧಿ ಫೋಟೊ ಹಾಕುವ ಅಗತ್ಯವೇನಿತ್ತು?
-ಎಲ್.ನಾಗೇಂದ್ರ, ಮಾಜಿ ಶಾಸಕ
ನೀಟ್ ಪರೀಕ್ಷೆ ಅಕ್ರಮ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಫ್ಲೆಕ್ಸ್ ಹಾಕಲಾಗಿತ್ತು. ಇದು ವಿದ್ಯಾರ್ಥಿಗಳಿಗೆ ಪ್ರಚೋದನೆ ಮಾಡಲಾಗುತ್ತದೆ ಎಂದು ಬಿಜೆಪಿಯವರು ಆರೋಪಿಸಿ ಅಡ್ಡಿಪಡಿಸಿದರು.
-ನಾಗೇಶ್ ಕರಿಯಪ್ಪ, ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ






