ಮೈಸೂರು | ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹಿಷ ದಸರಾ ಆಚರಣೆ

ಮೈಸೂರು: ಹಲವು ವರ್ಷಗಳಿಂದ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತಡೆಯೊಡ್ಡುತ್ತಿದ್ದ ಪೊಲೀಸರು, ಈ ಬಾರಿ ಪುಷ್ಪಾರ್ಚನೆಗೆ ಅವಕಾಶ ಕಲ್ಪಿಸಿದ್ದಾರೆ.
ಮಹಿಷ ದಸರಾ ಆಚರಣಾ ಸಮಿತಿಯು ಶನಿವಾರ ಮಹಿಷ ಮಂಡಲೋತ್ಸವ ಆಚರಿಸಲು ನಿರ್ಧರಿಸಿತ್ತು. ಅದರಂತೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದಾಗಿ ಘೋಷಿಸಿತ್ತು. ಆದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಅ. 9ರ ಮಧ್ಯರಾತ್ರಿ 12 ಗಂಟೆಯಿಂದ ಅ. 11ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು.
ಆದರೂ ಪಟ್ಟು ಬಿಡದ ಮಹಿಷ ದಸರಾ ಆಚರಣಾ ಸಮಿತಿಯ ಸದಸ್ಯರು, ಗಾಂಧಿನಗರದ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹಾಗೂ ಮಾಜಿ ಮೇಯರ್ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದಾಗಿ ಪಟ್ಟು ಹಿಡಿದಿದ್ದರು. ಇದರಿಂದ ಗೊಂದಲ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ನಗರ ಪೊಲೀಸರು ಪುಷ್ಪಾರ್ಚನೆಗೆ ಅವಕಾಶ ಕಲ್ಪಿಸಿದ್ದಾರೆ ಎನ್ನಲಾಗಿದೆ.
ಶನಿವಾರ ಬೆಳಿಗ್ಗೆ ಮಹಿಷ ದಸರಾ ಆಚರಣಾ ಸಮಿತಿಯ ಸದಸ್ಯರು ಬೈಕ್ ಹಾಗೂ ಕಾರುಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತಮ್ಮ ನಾಯಕನಿಗೆ ಗೌರವ ಸಲ್ಲಿಸಿದರು.
ಕಳೆದ ಆರೇಳು ವರ್ಷಗಳಿಂದ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡದಂತೆ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿಯ ಕೆಲವು ಮುಖಂಡರು ಹಾಗೂ ಹಿಂದುತ್ವ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ, ‘ಚಾಮುಂಡಿ ಚಲೋ’ ನಡೆಸುವುದಾಗಿಯೂ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಘರ್ಷದ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದ್ದುದರಿಂದ ಪೊಲೀಸರು ಎರಡೂ ಗುಂಪುಗಳಿಗೆ ಅವಕಾಶ ನೀಡದೆ, ಪ್ರತಿ ವರ್ಷ ಮಹಿಷ ದಸರಾ ಆಚರಣೆಯ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುತ್ತಿದ್ದರು.
ಆದರೆ, ಈ ಬಾರಿ ದಲಿತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ನಗರ ಪೊಲೀಸರು ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕಲ್ಪಿಸಿರುವುದು ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ನೆರವಾಗಿದೆ.






