ಮೈಸೂರು | ಪತ್ರಕರ್ತರಿಗೆೆ ಹಲ್ಲೆ, ಜಾತಿ ನಿಂದನೆ, ಕೊಲೆ ಬೆದರಿಕೆ ಆರೋಪ : ಅರಮನೆ ಮಂಡಳಿ ಡಿಡಿ ಸುಬ್ರಹ್ಮಣ್ಯ, ಸಿಬ್ಬಂದಿ ವಿರುದ್ಧ ಎಫ್‌ಐಆರ್

ಮೈಸೂರು : ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಅರಮನೆ ಮಂಡಳಿ ಉಪನಿರ್ದೇಶಕ ಮತ್ತು ಇತರ ಸಿಬ್ಬಂದಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದು ವರದಿಯಾಗಿದೆ.
ಫೆ.25ರಂದು ಇಂಡಿಯನ್ ಟಿವಿ ವರದಿಗಾರ ಕೆಂಡಗಣ್ಣ ಮತ್ತು ಕ್ಯಾಮರಾಮೆನ್ ರವಿ .ಎಂ ಎಂಬವರು ವರದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರಿಂದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಅರಮನೆ ಗೋಡೆ ಬಿರುಕು ಬಿಟ್ಟಿರುವ ಸಂಬಂಧ ಮಾಡಿದ್ದ ಸುದ್ದಿಗೆ ಪ್ರತಿಕ್ರಿಯೆ ಕೇಳಲು ತೆರಳಿದ್ದಾಗ ಟಿ.ಎಸ್.ಸುಬ್ರಹ್ಮಣ್ಯ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಸಹಚರರಿಂದ ಹಲ್ಲೆ ಮಾಡಿಸಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಕ್ಯಾಮರಾಮನ್ ರವಿ ಎಂ. ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಸಿಬ್ಬಂದಿ ಗಂಗಾಧರ ಸ್ವಾಮಿ, ಸಮರ್ಥ್ ಕೌಶಿಕ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪತ್ರಕರ್ತರ ಸಂಘ ಖಂಡನೆ: ಪತ್ರಕರ್ತರ ಮೇಲಿನ ಹಲ್ಲೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದೆ. ಮೈಸೂರಿನಲ್ಲಿ ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಆಗದ ವಾತಾವರಣ ನಿರ್ಮಾಣ ಆಗಿದಿಯಾ ಎನ್ನುವ ಆತಂಕ ಕಾಡುತ್ತಿದೆ. ವರದಿಗಾರನ್ನು ಇಷ್ಟು ಕೆಟ್ಟದಾಗಿ ನಡೆಸಿಕೊಂಡಿರುವ ಘಟನೆ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಆಗಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಂಡು ಪತ್ರಕರ್ತರಿಗೆ ನ್ಯಾಯ ಕೊಡಿಸಬೇಕು ಎಂದು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯಿಸಿದೆ.