ನಾನು ಮತ್ತು ಸಿದ್ದರಾಮಯ್ಯ ಚೆನ್ನಾಗಿಯೇ ಇದ್ದೇವೆ: ಸಚಿವ ಸತೀಶ್ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಚೆನ್ನಾಗಿಯೇ ಇದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರನ್ನು ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದೀರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ, ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅಂತಾರೆ. ನಿಮಗೆ ಹಾಗೆ ಅನ್ನಿಸಬಹುದು. ಸಿದ್ದರಾಮಯ್ಯ ಮತ್ತು ನಾನು ಚೆನ್ನಾಗಿಯೇ ಇದ್ದೇವೆ” ಎಂದು ಹೇಳಿದರು.
ತಮ್ಮ ವಿರುದ್ಧ ನಡೆದಿರುವ ಈಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಈಡಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡಿಲ್ಲ. ನೋಟಿಸ್ ಕೊಟ್ಟರೆ ಹೋಗಿ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಯಲ್ಲಿ ನಾನು ಯಾವುದೇ ಕಮಿಷನ್ ಪಡೆದಿಲ್ಲ. ಕಮಿಷನ್ ತೆಗೆದುಕೊಂಡಿದ್ದಾರೆ ಎನ್ನುವುದಕ್ಕೆ ದಾಖಲೆ ಬೇಕು. ನನ್ನ ಮೇಲೆ ಯಾಕೆ ದಾಳಿ ನಡೆಯಿತು ಎಂಬುದನ್ನು ತಿಳಿದುಕೊಳ್ಳಲು ನನಗೆ ಸಮಯ ಬೇಕು ಎಂದು ಹೇಳಿದರು.
ಕಳೆದ 12 ವರ್ಷಗಳಲ್ಲಿ ಬಿಜೆಪಿಯ ಯಾವುದೇ ನಾಯಕರ ಮೇಲೆ ಈಡಿ ದಾಳಿ ನಡೆದಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿಯವರ ವಿರುದ್ಧ ದೂರು ನೀಡಿದರೂ ದಾಳಿ ನಡೆಯುವುದಿಲ್ಲ ಎಂದು ಟೀಕಿಸಿದರು.
ನೀಲಿ ಶಾಲು ಕುರಿತು ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ದೇಶಕ್ಕೆ ನೀಲಿ ಶಾಲಿನ ಅವಶ್ಯಕತೆಯಿದೆ. ಈ ಬಗ್ಗೆ ನಮ್ಮ ಸ್ವಾಮೀಜಿ ಉತ್ತರ ಕೊಟ್ಟಿದ್ದಾರೆ. ಈ ವಿಚಾರವಾಗಿ ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿದರು.






