ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ; ಒಂದು ಲಕ್ಷ ಜನರನ್ನು ಸೇರಿಸುವ ಗುರಿ : ಡಾ.ಯತೀಂದ್ರ ಸಿದ್ದರಾಮಯ್ಯ
ಅಂಬೇಡ್ಕರ್ ಜೀವನ ಚರಿತ್ರೆ ಕುರಿತ ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ಮೈಸೂರು : ಸಂವಿಧಾನದ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೈಸೂರು ವಿಭಾಗದಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟೌನ್ ಹಾಲ್ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಶನಿವಾರ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರೊಂದಿಗೆ ಮಾಲಾರ್ಪಣೆ ಮಾಡಿ, ನಂತರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಕೃಷಿ ಸಚಿವ ನರೇಂದ್ರ ಸ್ವಾಮಿ ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಭಾಗವಹಿಸಲಿದ್ದಾರೆ. ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಗೆ ಕೆಲಸದ ನಿಮಿತ್ತ ಅವರು ಭಾಗವಹಿಸಿರಲಿಲ್ಲ, ಅವರ ಪುತ್ರ ಸಂಸದ ಸುನೀಲ್ ಬೋಸ್ ಭಾಗವಹಿಸಿದ್ದರು ಎಂದು ಪ್ರಶ್ನೆಯೊಂದಕ್ಕರ ಉತ್ತರಿಸಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ ನರೇಂದ್ರ ಸ್ವಾಮಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಎಚ್.ಎಸ್ ಬಿಂದ್ಯಾ, ಸಹಾಯಕ ನಿರ್ದೇಶಕ ಜನಾರ್ದನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.






