"ಹುದ್ದೆಗಿಂತ ರಾಷ್ಟ್ರ ದೊಡ್ಡದು": ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಿರ್ಧಾರವನ್ನು ಶ್ಲಾಘಿಸಿದ ಅಮಿತ್ ಶಾ

ಧರ್ಮೇಂದ್ರ ಪ್ರಧಾನ್ / ಅಮಿತ್ ಶಾ (Photo: PTI)
ಹೊಸದಿಲ್ಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದು, ಇದು ವೈಯಕ್ತಿಕ ಮಹತ್ವಾಕಾಂಕ್ಷೆಗಿಂತ ರಾಷ್ಟ್ರದ ಹಿತಾಸಕ್ತಿಗೆ ಆದ್ಯತೆ ನೀಡುವ ಕ್ರಮ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ Xನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಶಾ, "ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ರಾಷ್ಟ್ರ, ದೇಶದ ಯುವಕರು ಮತ್ತು ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತ ಹೆಚ್ಚಿನ ಪ್ರಾಮುಖ್ಯತೆ ಹೊಂದಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಇದೇ ತತ್ವದ ಪ್ರತಿಬಿಂಬವಾಗಿದೆ" ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ದೇಶದ ಯುವಜನರ ಭಾವನೆಗಳನ್ನು ಗೌರವಿಸುತ್ತಿದ್ದು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಬದ್ಧವಾಗಿದೆ ಎಂದು ಶಾ ತಿಳಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಕೈಗೊಂಡಿರುವ ನಿರ್ಧಾರಗಳನ್ನು ಶ್ಲಾಘಿಸಿದ ಅವರು, ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (NEET)ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಕ್ರಮಗಳಿಂದ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ಅಧಿಕಾರಾವಧಿಯನ್ನು ಸ್ಮರಿಸಿದ ಶಾ, ರಾಷ್ಟ್ರೀಯ ಶಿಕ್ಷಣ ನೀತಿ (NEP)ಯ ಪರಿಣಾಮಕಾರಿ ಅನುಷ್ಠಾನ, ಪಿಎಂ ಶ್ರೀ ಶಾಲೆಗಳ ವಿಸ್ತರಣೆ, ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ, ಕೌಶಲ್ಯಾಭಿವೃದ್ಧಿ ಬಲಪಡಿಸುವುದು ಹಾಗೂ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರಗಳ ನಡುವಿನ ಸಮನ್ವಯವನ್ನು ಹೆಚ್ಚಿಸುವಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಉಲ್ಲೇಖಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಸಮಗ್ರ ಹಾಗೂ ವಿದ್ಯಾರ್ಥಿಕೇಂದ್ರಿತಗೊಳಿಸುವ ನಿಟ್ಟಿನಲ್ಲಿ ಪ್ರಧಾನ್ ಕೈಗೊಂಡ ಪ್ರಯತ್ನಗಳು ಗಮನಾರ್ಹವಾಗಿದ್ದು, ಅವರ ಅಧಿಕಾರಾವಧಿಯು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಅವರು ಹೊಂದಿದ್ದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಶಾ ಹೇಳಿದ್ದಾರೆ.






