"ವಾಸ್ತವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ" : ಜಮ್ಮಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

Photo credit: PTI
ಹೊಸದಿಲ್ಲಿ : ಜಮ್ಮಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃಸ್ಥಾಪಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾಸ್ತವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು, ವಿಚಾರಣೆಯ ಸಮಯದಲ್ಲಿ ಪಹಲ್ಗಾಮ್ ಸಮಸ್ಯೆಯ ಮಹತ್ವದ ಬಗ್ಗೆ ಹೇಳಿದ್ದಾರೆ. ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃಸ್ಥಾಪಿಸುವ ಅರ್ಜಿಯ ಕುರಿತು ಎಂಟು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕಳೆದ ವರ್ಷ ಶಿಕ್ಷಣ ತಜ್ಞ ಝಹೂರ್ ಅಹ್ಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಖುರ್ಷಿದ್ ಅಹ್ಮದ್ ಮಲಿಕ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ಎರಡು ತಿಂಗಳೊಳಗೆ ಜಮ್ಮಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿತ್ತು. ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಲ್ಲಿ ಯಾವುದೇ ವಿಳಂಬವು ಜಮ್ಮು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವನ್ನು ಕುಗ್ಗಿಸುತ್ತದೆ, ಇದು ಭಾರತದ ಸಂವಿಧಾನದ ಮೂಲ ರಚನೆಯ ಭಾಗವಾಗಿರುವ ಒಕ್ಕೂಟದ ತತ್ವಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.







