ಕಾವೇರಿ ನದಿ ನೀರು ವಿವಾದ: ಸಿಎಡಬ್ಲ್ಯು ಎಂಎ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ
ಹೊಸದಿಲ್ಲಿ: ತಮಿಳುನಾಡಿಗೆ 5, 000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಎಡಬ್ಲ್ಯು ಎಂಎ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಲು ಸುಪ್ರೀಂಕೋರ್ಟ್ ಪ್ರಾಧಿಕಾರಕ್ಕೆ ಆದೇಶಿಸಿದೆ ಎಂದು ANI ವರದಿ ಮಾಡಿದೆ
ಸುಪ್ರೀಂಕೋರ್ಟ್ ಪ್ರಾಧಿಕಾರದ ಆದೇಶವನ್ನು ಎತ್ತಿಹಿಡಿದ ಕಾರಣ ಕಾವೇರಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದ ಕರ್ನಾಟಕಕ್ಕೆ ತೀವ್ರ ಹಿನ್ನಡೆಯಾಗಿದೆ.
ಅರ್ಜಿ ವಿಚಾರಣೆ ನಡೆಸಿದ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನಿಯಂತ್ರಣ ಆಯೋಗ ಹಾಗೂ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಹಾಗೂ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲಎಂದು ಹೇಳಲಾಗುವುದಿಲ್ಲ. ಎರಡೂ ಸಮಿತಿಗಳ ಆದೇಶಗಳನ್ನು ಒಪ್ಪಬೇಕಾಗುತ್ತದೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು. ಹೀಗಾಗಿ ಕರ್ನಾಟಕ ನಿತ್ಯ 5,000 ಕ್ಯೂಸೆಕ್ಸ್ ನೀರು ಹರಿಸಲೇಬೇಕು ಎಂದು ಹೇಳಿದೆ.
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಬಿಡಬೇಕು. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶ ಪಾಲಿಸಬೇಕು ಎಂದು ಪೀಠ ಹೇಳಿದೆ.