ಕೇಂದ್ರ ಸಂಪುಟ ಪುನರ್ರಚನೆ ಸಾಧ್ಯತೆ; ನಿರ್ಮಲಾ ಸೀತಾರಾಮನ್ ಬದಲು ಹಣಕಾಸು ಸಚಿವರಾಗಿ RBI ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್?

Photo | theweek
ಹೊಸದಿಲ್ಲಿ: ಕೇಂದ್ರ ಸಚಿವ ಸಂಪುಟ ಪುನರ್ರಚನೆ ಹಾಗೂ ಬಿಜೆಪಿಯ ಸಾಂಸ್ಥಿಕ ರಚನೆಯಲ್ಲಿ ಬದಲಾವಣೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವಿನ ಇತ್ತೀಚಿನ ಭೇಟಿ ಹಾಗೂ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಪತಿಯನ್ನು ಭೇಟಿ ಮಾಡಿರುವುದು ಈ ಊಹಾಪೋಹಗಳಿಗೆ ಕಾರಣವಾಗಿದೆ.
ಮೂಲಗಳ ಪ್ರಕಾರ, ಸಂಸತ್ತಿನ ಮುಂಬರುವ ಮಳೆಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನರ್ರಚನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರ ಹೆಸರೂ ಚರ್ಚೆಯಲ್ಲಿದೆ.
ಶಕ್ತಿಕಾಂತ ದಾಸ್ ಅವರನ್ನು ಕೇಂದ್ರ ಹಣಕಾಸು ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆಯನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಹಾಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ವರ್ಗಾಯಿಸಬಹುದು ಎಂಬ ಊಹಾಪೋಹಗಳೂ ಕೇಳಿಬಂದಿವೆ. ನಿರ್ಮಲಾ ಸೀತಾರಾಮನ್ ಅವರು 2019ರಿಂದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ, ಈ ಕುರಿತು ಕೇಂದ್ರ ಸರಕಾರ ಅಥವಾ ಬಿಜೆಪಿ ಪಕ್ಷದಿಂದ ಯಾವುದೇ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ.
ಈ ಬದಲಾವಣೆಗಳು ಕಾರ್ಯರೂಪಕ್ಕೆ ಬಂದರೆ, ನಾಲ್ಕು ದಶಕಗಳಿಗೂ ಹೆಚ್ಚು ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಯೊಬ್ಬರು ಕೇಂದ್ರ ಸಚಿವ ಸಂಪುಟವನ್ನು ಸೇರುವ ಸಾಧ್ಯತೆ ಇದೆ.
ಶಕ್ತಿಕಾಂತ ದಾಸ್ ಅವರು 2018ರಿಂದ 2024ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ನ 25ನೇ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮುನ್ನ ಅವರು 15ನೇ ಹಣಕಾಸು ಆಯೋಗದ ಸದಸ್ಯರಾಗಿದ್ದರು ಮತ್ತು ಭಾರತದ ಜಿ-20 ಶೆರ್ಪಾ ಆಗಿಯೂ ಸೇವೆ ಸಲ್ಲಿಸಿದ್ದರು.
ತಮ್ಮ ವೃತ್ತಿಜೀವನದಲ್ಲಿ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದು, ಹಣಕಾಸು, ತೆರಿಗೆ, ಕೈಗಾರಿಕೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು.
ಹಣಕಾಸು ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದ ಅವಧಿಯಲ್ಲಿ ಅವರು ಎಂಟು ಕೇಂದ್ರ ಬಜೆಟ್ಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ, ನೋಟು ಅಮಾನ್ಯೀಕರಣದ ಯೋಜನೆ ಮತ್ತು ಅನುಷ್ಠಾನದ ಸಂದರ್ಭದಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ದಿಲ್ಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಶಕ್ತಿಕಾಂತ ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ನ್ಯೂ ಡೆವಲಪ್ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ, ಐಎಂಎಫ್, ಜಿ-20, ಬ್ರಿಕ್ಸ್ ಮತ್ತು ಸಾರ್ಕ್ ಸೇರಿದಂತೆ ವಿವಿಧ ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.






