ಆಪರೇಷನ್ ಸಿಂಧೂರ್ ಕುರಿತು ವಿಶೇಷ ಅಧಿವೇಶನ ಕರೆಯಬೇಕೆಂಬ ವಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ : ವರದಿ

Photo | NDTV
ಹೊಸದಿಲ್ಲಿ : ಆಪರೇಷನ್ ಸಿಂಧೂರ್ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕೆಂಬ ವಿಪಕ್ಷಗಳ ಬೇಡಿಕೆಯನ್ನು ಸರಕಾರ ಪರಿಗಣಿಸುವುದಿಲ್ಲ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿರುವ ಬಗ್ಗೆ NDTV ವರದಿ ಮಾಡಿದೆ.
ಜುಲೈನಲ್ಲಿ ಮಳೆಗಾಲದ ಅಧಿವೇಶನ ನಡೆಯಲಿರುವುದರಿಂದ ವಿಶೇಷ ಅಧಿವೇಶನ ನಡೆಸುವುದಿಲ್ಲ. ಮಳೆಗಾಲದ ಅಧಿವೇಶನದಲ್ಲೂ ಆಪರೇಷನ್ ಸಿಂಧೂರ್ ಕುರಿತು ಚರ್ಚಿಸಬೇಕೆಂಬ ವಿಪಕ್ಷಗಳ ಬೇಡಿಕೆಯನ್ನು ಸರಕಾರ ಪರಿಗಣಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿದೆ.
ಆಪರೇಷನ್ ಸಿಂಧೂರ್ ಕುರಿತ ಎಲ್ಲಾ ಮಾಹಿತಿಗಳನ್ನು ಸರ್ವಪಕ್ಷ ಸಭೆಯಲ್ಲಿ ತಿಳಿಸಲಾಗಿದೆ ಎಂದು ಈ ಮೊದಲು ಕೇಂದ್ರ ಸರಕಾರ ಹೇಳಿತ್ತು.
ಎಪ್ರಿಲ್ 22ರಂದು ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ 26 ನಾಗರಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದರಿಂದ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಂಟಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಯನ್ನು ಗುರಿಯಾಗಿಸಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಚರಣೆ ನಡೆಸಿತ್ತು.
ಆಪರೇಷನ್ ಸಿಂಧೂರ್ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದರು.







