Delhi | ನಾಲ್ಕಂತಸ್ತಿನ ಕಟ್ಟಡದಲ್ಲಿ ಬೆಂಕಿ: ನಾಲ್ವರು ಮೃತ್ಯು, ಇಬ್ಬರಿಗೆ ಗಾಯ
ಇ-ರಿಕ್ಷಾಗಳನ್ನು ಚಾರ್ಜ್ ಮಾಡುತ್ತಿದ್ದ ನೆಲ ಅಂತಸ್ತಿನಲ್ಲಿ ಅವಘಡ

Photo credit : timesofindia
ಹೊಸದಿಲ್ಲಿ: ಪೂರ್ವ ದಿಲ್ಲಿಯ ವಿಶ್ವಾಸ್ ನಗರದಲ್ಲಿರುವ ನಾಲ್ಕಂತಸ್ತಿನ ಕಟ್ಟಡವೊಂದರಲ್ಲಿ ರವಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ರವಿವಾರ ಮುಂಜಾನೆ ಸುಮಾರು 4:30ರ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿದ್ದವರು ನಿದ್ರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ವಿಶ್ವಾಸ್ ನಗರದ 11ನೇ ಬೀದಿಯಲ್ಲಿರುವ ಕಟ್ಟಡವು ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ್ದು, ಮಹೇಂದರ್ ಎಂಬವರಿಗೆ ಬಾಡಿಗೆಗೆ ನೀಡಲಾಗಿತ್ತು.
ಕಟ್ಟಡದ ನೆಲ ಅಂತಸ್ತಿನಲ್ಲಿ ಇ-ರಿಕ್ಷಾಗಳನ್ನು ನಿಲ್ಲಿಸಿ ಚಾರ್ಜ್ ಮಾಡಲಾಗುತ್ತಿತ್ತು. ಇ-ರಿಕ್ಷಾ ಚಾಲಕರು ಅಲ್ಲಿಯೇ ಮಲಗುತ್ತಿದ್ದರು. ಈ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ರಾಮ್ವೀರ್ (50) ಎಂಬವರು ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದರು.
ಗಾಯಗೊಂಡ ಇಬ್ಬರನ್ನು ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ವಾಹನಗಳು, ನಾಲ್ಕು ಆಂಬ್ಯುಲೆನ್ಸ್ ಗಳು ಹಾಗೂ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿವೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.






